ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯಲ್ಲಿನ ಹೋಂ ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆ ಮಾರ್ಗಸೂಚಿಗಳನ್ವಯ ನಡೆಸಬೇಕು. ಇರದಿದ್ದರೆ ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅನಧಿಕೃತವಾಗಿ ಹೋಂ ಸ್ಟೇ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೋಂ ಸ್ಟೇ ಮಾಲೀಕರಿಗೆ ಎಚ್ಚರಿಕೆ ನೀಡಿದರು.ಜಿಲ್ಲಾಡಳಿತದ ಕೆಸ್ವಾನ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವಿಶೇಷ ಸಮಿತಿ ಸಭೆಯಲ್ಲಿ 2025-26ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಹಾಯಧನದೊಂದಿಗೆ ಮೊಬೈಲ್ ಕ್ಯಾಂಟಿನ ಖರೀದಿಸುವ ಯೋಜನೆಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ಭವಿಷ್ಯದ ದಿನಗಳಲ್ಲಿ ಅನಧಿಕೃತ ಹೊಂ ಸ್ಟೇ ನಿರ್ವಹಿಸಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು. ನಗರದಲ್ಲಿ ಪುರಾತನ ನೀರು ಸರಬರಾಜು ವ್ಯವಸ್ಥೆ (ಕರೇಜ್) ಅನುಷ್ಠಾನಗೊಳಿಸುವ ಸಂಬಂಧ ಪುರಾತತ್ವ, ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯಿಂದ ತಕ್ಷಣವೇ ಕ್ರಿಯಾಯೋಜನೆ (ಡಿಪಿಆರ್) ಸಿದ್ಧಪಡಿಸಬೇಕು ಎಂದು ಐಎಚ್‌ಸಿಎನ್‌ಎಫ್ ಸಂಸ್ಥೆಯ ನಿರ್ದೇಶಕ ರಾಯಕರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.ಸಾರ್ವಜನಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅನುದಾನದಡಿ ನಗರದ ಐತಿಹಾಸಿಕ ತಾಜಬಾವಡಿ ಸ್ಮಾರಕ ಅಭಿವೃದ್ಧಿ ಪಡಿಸುವ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪುರಾತತ್ವ, ವಸ್ತು ಸಂಗ್ರಹಾಲಯ ಇಲಾಖೆ ಅಧಿಕಾರಿಗಳು ಪ್ರವಾಸೋದ್ಯಮ ಇಲಾಖೆಯ ಸಮನ್ವಯದೊಂದಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಸೂಚಿಸಿದರು. ನಗರದ ಐತಿಹಾಸಿಕ ಸ್ಮಾರಕಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ತಾಣಗಳಿಗೆ ಗ್ರಾಪಂ, ಪ.ಪಂ., ತಾ.ಪಂ. (ಮನರೇಗಾ), ಸ್ವಚ್ಛ ಭಾರತ ಮಿಷನ್ ಹಾಗೂ ಮಹಾನಗರ ಪಾಲಿಕೆ ಅನುದಾನದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಪ್ರಸ್ತಾವನೆ ಸಲ್ಲಿಸಲು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಹಿಳೆ ಮತ್ತು ಮಕ್ಕಳ ಸಂರಕ್ಷಣೆಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಮಿತ್ರ ಸಿಬ್ಬಂದಿ ನೇಮಿಸಲಾಗಿದೆ. ಮಕ್ಕಳ ಸಂರಕ್ಷಣೆ ಜಾಗೃತಿಗಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ: 1098 ಕರೆ ಮಾಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
2024-25ನೇ ಸಾಲಿನ ಆಯವ್ಯಯದಲ್ಲಿ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿಯಲ್ಲಿ) ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಹಾಗೂ ಕ್ರೂಸ್ ಟೂರಿಸಂ ಅಭಿವೃದ್ಧಿಪಡಿಸಲು ಈಗಾಗಲೇ ಸಮಿತಿಯ ಶಿಫಾರಸು ಮಾಡಿರುವಂತೆ ಆಲಮಟ್ಟಿ ಹಿನ್ನಿರಿನ ಪ್ರದೇಶದಲ್ಲಿ ಬರುವ ಮರೆಮಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿದ್ದು, ಈ ನಿವೇಶನಕ್ಕೆ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳು ಅನುಮತಿ ನೀಡಬೇಕು. ಪ್ರವಾಸೋದ್ಯಮ ಇಲಾಖೆಯ ಒನ್ ಡಿಸ್ಟಿçಕ್ಟ್ ಒನ್ ಡೆಸ್ಟಿನೇಶನ ಯೋಜನೆಯಡಿ ಆಲಮಟ್ಟಿ ಪ್ರವಾಸಿ ತಾಣ ಅಭಿವೃದ್ಧಿಪಡಿಸಲು ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸಿ ಮಾದರಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಕುರಿತು ಆಲಮಟ್ಟಿಯ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರೊಂದಿಗೆ ಇದೇ ವೇಳೆ ಚರ್ಚಿಸಲಾಯಿತು.ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾಗಿರುವ ಯಾತ್ರಿನಿವಾಸ, ಮೂಲಭೂತ ಸೌಕರ್ಯ ಕಾಮಗಾರಿಗಳ ಪ್ರಗತಿ ಪರೀಶೀಲನೆ ಮಾಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲು ಹಾಗೂ ಪ್ರಾರಂಭಿಸದೇ ಇರುವ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಕೆ.ಆರ್.ಡಿ.ಎಲ್, ನಿರ್ಮಿತಿ ಕೇಂದ್ರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಭವಿಷ್ಯದ ದಿನಗಳಲ್ಲಿ ಅನಧಿಕೃತ ಹೊಂ ಸ್ಟೇ ನಿರ್ವಹಿಸಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿನ ಹೋಂ ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆ ಮಾರ್ಗಸೂಚಿಗಳನ್ವಯ ನಡೆಸಬೇಕು. ಇರದಿದ್ದರೆ ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅನಧಿಕೃತವಾಗಿ ಹೋಂ ಸ್ಟೇ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
-ಡಾ.ಆನಂದ.ಕೆ, ಜಿಲ್ಲಾಧಿಕಾರಿ