ಸಾರಾಂಶ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್.ಡಿ.ಎ ಮೈತ್ರಿಕೂಟ 19 ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ವತಿಯಿಂದ ಶುಕ್ರವಾರ ನಡೆದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾತನಾಡಿ, ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಮದ, ಹಣ ಬಲದ ಮೇಲೆ ಮೆರೆಯುತ್ತಿದ್ದವರಿಗೆ ಜಿಲ್ಲೆಯ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕಾರ್ಯಕರ್ತರ ಸಂಘಟಿತ ಪರಿಶ್ರಮದ ಫಲವಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು.ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬೇಸತ್ತು ಜನತೆ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಿಗೆ ಮತ ಹಾಕಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ, ಕಾನೂನು ಬಾಹಿರ ಚಟುವಟಿಕೆ ಹೆಚ್ಚುತ್ತಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರುಪಾಯಿ ಲೂಟಿ ಹೊಡೆಯಲಾಗಿದೆ. ಈ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಸಂಸದ ಈರಣ್ಣ ಕಡಾಡಿ, ಮಾಜಿ ಸಂಸದೆ ಮಂಗಲಾ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಸಂಜಯ ಪಾಟೀಲ, ಸಂಸದ ಜಗದೀಶ ಶೆಟ್ಟರ್, ಜಗದೀಶ ಮೆಟಗುಡ್ಡ, ಮಹಾಂತೇಶ ದೊಡಗೌಡರ, ವಿಶ್ವನಾಥ್ ಪಾಟೀಲ, ಅರವಿಂದ ಪಾಟೀಲ, ರತ್ನಾ ಮಾಮನಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.