ಕನಕಗಿರಿ ಉತ್ಸವ ಕಾಲಮಿತಿಯೊಳಗೆ ಎಲ್ಲ ಕೆಲಸ ಪೂರ್ಣಗೊಳ್ಳಲಿ: ಜಿಲ್ಲಾಧಿಕಾರಿ ನಳಿನ್ ಅತುಲ್

| Published : Feb 23 2024, 01:47 AM IST

ಸಾರಾಂಶ

ಉತ್ಸವ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ರಚಿಸಲ್ಪಟ್ಟ ಎಲ್ಲ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು.

ಕೊಪ್ಪಳ: ಕನಕಗಿರಿ ಉತ್ಸವದ ಸಿದ್ಧತೆಗೆ ಎಲ್ಲ ಸಮಿತಿಗಳಿಗೆ ವಹಿಸಿದ ಕಾರ್ಯ ನಿರ್ವಹಣೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ವಿಶೇಷ ಒತ್ತು ಕೊಡಬೇಕು ಎಂದು ಕನಕಗಿರಿ ಉತ್ಸವ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.ಕನಕಗಿರಿ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮತ್ತೊಂದು ಸುತ್ತಿನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಉತ್ಸವ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ರಚಿಸಲ್ಪಟ್ಟ ಎಲ್ಲ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಈ ಉತ್ಸವ ಆಚರಣೆ ಸಂದರ್ಭದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಲಿ. ಕನಕಗಿರಿಯಲ್ಲಿ ಸರ್ಕಾರಿ ಕಟ್ಟಡಗಳು, ಗ್ರಂಥಾಲಯ, ಶಾಲಾ ಕಟ್ಟಡಗಳು ಮತ್ತು ಉತ್ಸವದ ಮೆರವಣಿಗೆ ಸಾಗಿ ಬರುವ ರಸ್ತೆ ಹಾಗೂ ಪ್ರಮುಖ ವೃತ್ತಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಸಮಿತಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮಾತನಾಡಿ, ಉತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಪ್ರಯಾಣಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಕಲಾವಿಧರಿಗೆ ಅಗತ್ಯ ವಸತಿ ಸೇರಿದಂತೆ ಎಲ್ಲರಿಗೂ ಅಗತ್ಯ ಕುಡಿಯುವ ನೀರು, ಊಟದ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದ ಯಶಸ್ವಿಯಾಗಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡ್ರ ಅವರು ಮಾತನಾಡಿ, ಕನಕಗಿರಿ ಉತ್ಸವ ಅಂಗವಾಗಿ ಕುಸ್ತಿ, ಹಗ್ಗ ಜಗ್ಗಾಟ, ಕಬಡ್ಡಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳೊಂದಿಗೆ ವಾಲಿಬಾಲ್ ನಂತಹ ಕ್ರೀಡೆಗಳು ಹಮ್ಮಿಕೊಂಡಿದ್ದು, ವಾಲಿವಾಲ್ ಪ್ರದರ್ಶನ ಪಂದ್ಯಾವಳಿಯಲ್ಲಿ ಚೆನ್ನೈ ತಂಡ ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತ ಕ್ಯಾ.ಮಹೇಶ್ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜಿನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ಎಲ್ಲ ಸಮಿತಿಗಳ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.