ಕನ್ನಡಪ್ರಭ ವಾರ್ತೆ ವಿಜಯಪುರ
ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಕೆಲಸವಲ್ಲ, ಅದು ನಮ್ಮ ನಿರಂತರ ಹವ್ಯಾಸವಾಗಬೇಕು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕೈಜೋಡಿಸಿ ಗ್ರಾಮದಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಿಡಗುಂದಿ ವಿಕೆಎಸ್‌ಎಂಎಸ್ ಸಂಸ್ಥೆ ಆಡಳಿತಾಧಿಕಾರಿ ಕುಮಾರಗೌಡ ಹರನಾಳ ಹೇಳಿದರು.ತಾಲೂಕಿನ ತಿಡಗುಂದಿ ಗ್ರಾಮದಲ್ಲಿ ವಿಕೆಎಸ್‌ಎಂಎಸ್ ಪಿಯು ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಮಹತ್ವವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಚ್ಛತೆ ಬಗ್ಗೆ ಜಾಗೃತಿ ಹೊಂದಬೇಕು. ಸ್ವಚ್ಛತೆ ಮಹತ್ವ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದರು.
ವಿಕೆಎಸ್‌ಎಂಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಒಟ್ಟಾಗಿ ಜಿಲ್ಲಾ ಪಂಚಾಯತಿ ಆವರಣ, ಅಂಗನವಾಡಿ ಆವರಣ, ಶಾಲಾ ಆವರಣ, ಆರೋಗ್ಯ ಕೇಂದ್ರ, ಗ್ರಾಮದ ಪ್ರಮುಖ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ಕಸ ವಿಲೇವಾರಿ, ಪ್ಲಾಸ್ಟಿಕ್ ಮುಕ್ತ ಪರಿಸರ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರ ಪಾತ್ರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಮುಖಂಡರಾದ ಮನೋಹರ ತಿಲ್ಲಿಹಾಳ, ಗಿರೀಶ ತಾಳಿಕೋಟಿ, ಪ್ರಾಂಶುಪಾಲ ಅಣ್ಣಯ್ಯ ಕೋರಿ, ಭೋಧಕ ಹಾಗೂ ಭೋಧಕೇತರ ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿಗಳು ಇದ್ದರು.