ಹಸಿ ಮತ್ತು ಒಣ ಕಸವನ್ನು ಮೂಲದಲ್ಲಿಯೇ ವಿಂಗಡಿಸಿ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಹಾಗೂ ಸುಂದರ ನಗರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು.

ಹುಬ್ಬಳ್ಳಿ:

ಸ್ವಚ್ಛತೆ ಕೇವಲ ಒಂದು ದಿನದ ಅಭಿಯಾನಕ್ಕೆ ಸೀಮಿತವಾಗದೆ, ಪ್ರತಿಯೊಬ್ಬರ ನಿರಂತರ ಜೀವನಶೈಲಿಯಾಗಬೇಕು ಎಂದು ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಹೇಳಿದರು.

ಅವರು ಸ್ವಚ್ಛತಾ ಹಿ ಸೇವಾ ಅಭಿಯಾನ ಹಾಗೂ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಸೋಮವಾರ ನಗರದ ಶ್ರೀ ಸಿದ್ಧಾರೂಢ ಮಠದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳು, ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಮಠದ ಆವರಣ ಮತ್ತು ಸುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿದರು. ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಜತೆಗೆ, ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಮುಂದುವರಿಸುವಂತೆ ಕರೆ ನೀಡಲಾಯಿತು.

ಹಸಿ ಮತ್ತು ಒಣ ಕಸವನ್ನು ಮೂಲದಲ್ಲಿಯೇ ವಿಂಗಡಿಸಿ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಹಾಗೂ ಸುಂದರ ನಗರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

ಈ ವೇಳೆ ಪಾಲಿಕೆ ಉಪ ಆಯುಕ್ತ ವಿಜಯಕುಮಾರ್ ಆರ್, ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಘನ ತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಂತೋಷಕುಮಾರ್ ಯರಂಗಳ್ಳಿ, ವಲಯ ಆಯುಕ್ತ ಮಲ್ಲಿಕಾರ್ಜುನ ಸಬರದ, ಎಚ್‌.ವೈ. ಅಸಂಗಿ, ಆನಂದ ಕೇಸರಕೊಪ್ಪ, ಚಂದ್ರಶೇಖರ ಪಾಟೀಲ, ಅರವಿಂದ ಜಮಖಂಡಿ, ಪರಿಸರ ಎಂಜಿನಿಯರ್‌ಗಳು, ಆರೋಗ್ಯ ನಿರೀಕ್ಷಕರು, ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.