ಸಾರಾಂಶ
ಏ. ೨೮ರಂದು ಮೋದಿಯವರು ಶಿರಸಿಗೆ ಆಗಮಿಸುತ್ತಿದ್ದು, ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.
ಸಿದ್ಧಾಪುರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಉಳಿದ ಗ್ಯಾರಂಟಿಗಳನ್ನು ಕೊಡುವ ಬದಲು ರಾಜ್ಯದ ಮಹಿಳೆಯರ ಸುರಕ್ಷತೆಯ ಗ್ಯಾರಂಟಿ ನೀಡಿದರೆ ಉತ್ತಮ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತದೆ. ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಬದಲಾಗಿ ಕೊಲೆಗಾರರ ಮನೆಗೆ ಭದ್ರತೆಯನ್ನು ಒದಗಿಸಿದೆ. ಇದರಿಂದ ಸರ್ಕಾರ ಯಾರ ಓಲೈಕೆಗೆ ನಿಂತಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಇನ್ನಾದರೂ ಜನ ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳು ಇನ್ನಷ್ಟು ಕಠಿಣವಾಗುವುದರಲ್ಲಿ ಸಂಶಯವಿಲ್ಲ ಎಂದರು. ಬಿಜೆಪಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿದೆ ಎಂದು ಅಪಪ್ರಚಾರ ನಡೆಯುತ್ತಿದೆ. ಆದರೆ ಮೋದಿಯವರ ಯೋಜನೆಗಳು ಯಾವುದೇ ಧರ್ಮಕ್ಕೆ, ಜಾತಿಗೆ ಸೀಮಿತವಾಗಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಯ ಲಾಭವನ್ನು ಸಲ್ಲಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲಬೇಕು ಎಂದರು. ಏ. ೨೮ರಂದು ಮೋದಿಯವರು ಶಿರಸಿಗೆ ಆಗಮಿಸುತ್ತಿದ್ದು, ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಿದ್ದಾಪುರ ಮಂಡಲ ಬಿಜೆಪಿ ಅಧ್ಯಕ್ಷ ತಿಮ್ಮಪ್ಪ ಎಂ.ಕೆ., ನಿಕಟಪೂರ್ವ ಮಂಡಲಾಧ್ಯಕ್ಷ ಮಾರುತಿ ನಾಯ್ಕ ಇತರರಿದ್ದರು.