ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗಿರಲಿ-ಡಿಸಿ ದಾನಮ್ಮನವರ

| Published : Sep 13 2024, 01:31 AM IST

ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗಿರಲಿ-ಡಿಸಿ ದಾನಮ್ಮನವರ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ನಿರ್ದೇಶನದಂತೆ ರಾಜ್ಯದ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯ ವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸೆ. ೧೫ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಹಾವೇರಿ: ಸರ್ಕಾರದ ನಿರ್ದೇಶನದಂತೆ ರಾಜ್ಯದ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯ ವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸೆ. ೧೫ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಕಾರ್ಯಕ್ರಮ ರಾಣಿಬೆನ್ನೂರ ನಗರದಲ್ಲಿ ಜರುಗಲಿದ್ದು, ಸಚಿವರು, ಶಾಸಕರು, ಸ್ಥಳೀಯ ಜನಪ್ರತಿನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸೆ. ೧೫ರಂದು ಬೆಳಗ್ಗೆ ೯ ಗಂಟೆಯಿಂದ ೯.೩೦ರ ವರೆಗೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕು ಕುಮಾರಪಟ್ಟಣಂದಿಂದ -ಕವಲೆತ್ತು- ಚಳಗೇರಿ- ರಾಣಿಬೆನ್ನೂರು - ಗುಡ್ಡದಾನ್ವೇರಿ-ಕೆರಿಮಲ್ಲಾಪುರ- ಗುಡಿಹೊನ್ನತ್ತಿ -ಹಳೇಹೊನ್ನತ್ತಿ- ಮಾದಾಪುರ ತಿಮ್ಮಾಪುರ- ಗುತ್ತಲ- ನೆಗಳೂರು- ಮರೋಳ- ಹಾಲಗಿ ಮಾರ್ಗವಾಗಿ ಲಕ್ಷ್ಮೇಶ್ವರ ತಾಲೂಕು ಬಾಲೇಹೊಸೂರ ವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಈ ಮಾರ್ಗದಲ್ಲಿ ಶಾಲಾ-ಕಾಲೇಜುಗಳನ್ನು ಗುರುತಿಸಲಾಗಿದ್ದು, ಪ್ರತಿ ಒಂದು ಕಿ.ಮೀ.ಗೆ ಒಂದು ಸಾವಿರ ಜನರು ಬೇಕಾಗುತ್ತಾರೆ. ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು, ದಲಿತ ಸಂಘಟನೆಗಳು, ಸಹಕಾರಿ ಸಂಘಟನೆಗಳು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಪ್ರತಿ ಎರಡುವರೆ ಕಿಮೀಗೆ ಓರ್ವ ತಾಲೂಕು ಮಟ್ಟದ ನೋಡಲ್ ಅಧಿಕಾರಿ ಹಾಗೂ ಪ್ರತಿ ಐದು ಕಿ.ಮೀ.ಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರತಿ ಅರ್ಧ ಕಿ.ಮೀ.ಗೆ ಓರ್ವ ಎಎಸ್‌ಐ, ಹೆಡ್ ಕಾನ್‌ಸ್ಟೆಬಲ್‌, ಕಾನ್‌ಸ್ಟೆಬಲ್‌ಗಳನ್ನು ಸೂಕ್ತ ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಹಾಗೂ ಆರೋಗ್ಯ ಸಿಬ್ಬಂದಿ ಸಹ ನೇಮಕ ಮಾಡಲಾಗಿದೆ ಎಂದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಹಾಗೂ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶ, ವಿವಿಧ ತಾಲೂಕುಗಳ ತಹಸೀಲ್ದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ದಲಿತ ಸಂಘನೆಗಳ, ರೈತ ಸಂಘಟನೆಗಳ, ಕನ್ನಡಪರ ಸಂಘಟನೆಗಳ, ಸ್ತ್ರೀ ಶಕ್ತಿ ಸಂಘಟನೆಗಳ ಹಾಗೂ ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.