ಸಾರಾಂಶ
ಕಾರವಾರ: ಪ್ರತಿಯೊಬ್ಬ ನೌಕರರು ಈ ಎಲ್ಲ ಒತ್ತಡಗಳ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಹಾಗೂ ತಮ್ಮ ಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.
ಅವರು ಶನಿವಾರ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್‌ಡಿಪಿಆರ್, ಕಂದಾಯ, ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.ಸಮಾಜದಲ್ಲಿ ಬದಲಾವಣೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯಲ್ಲಿ 21ಕ್ಕೂ ಅಧಿಕ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಜಿಪಂನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ತಾಪಂಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಒಮ್ಮತದಿಂದ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾಮಾನ್ಯ ಜನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಮುಟ್ಟಿಸುವಂತಹ ಕಾರ್ಯಗಳನ್ನು ಮಾಡಿದರೆ ಮಹತ್ತರವಾದ ಸಾಧನೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕು ಎಂದರು.
ಕೆಲಸದ ನಿರಂತರ ಒತ್ತಡದ ಮಧ್ಯೆಯೂ ನೌಕರರು ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು. ತಮ್ಮನ್ನೇ ನಂಬಿಕೊಂಡಿರುವ ಕುಟುಂಬ ವರ್ಗಕ್ಕೂ ಸಮಯ ಮೀಸಲಿಡುವ ಅಗತ್ಯವಿದೆ ಎಂದರು.ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಕ್ರೀಡಾಪಟುಗಳಿಗೆ ಕ್ರೀಡಾಜೋತಿ ಹಸ್ತಾಂತರಿಸಿ ಮಾತನಾಡಿ, ಅತ್ಯಂತ ವಿಶಾಲವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ನೌಕರರಿಗೆ ಪರಸ್ಪರ ಮುಖಾಮುಖಿ ಭೇಟಿಗೆ ಇಂತಹ ಕ್ರೀಡಾಕೂಟ ಸಹಕಾರಿಯಾಗಿವೆ. ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದರಿಂದ ಪ್ರತಿಯೊಬ್ಬರಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಆರೋಗ್ಯ ವೃದ್ಧಿಯಾಗುವಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಕ್ರೀಡೆ ಎಂದರೆ ಸೋಲು-ಗೆಲವು ಇದ್ದೇ ಇರುತ್ತದೆ. ಆದರೆ ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿದ್ದಲ್ಲಿ ಪ್ರತಿಯೊಬ್ಬರೂ ವಿಜೇತರೆ ಆಗಿರುತ್ತೀರಿ. ಸೋಲು-ಗೆಲುವಿನ ಬಗ್ಗೆ ಚಿಂತಿಸದೇ ಪರಸ್ಪರ ಆತ್ಮೀಯತೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.ಜಿಲ್ಲೆಯ ಗ್ರಾಪಂಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುರುತಿಸಿ ಜಿಲ್ಲಾ ಪಂಚಾಯಿತಿಯಿಂದ ನೀಡಲಾಗುವ, ಬೆಸ್ಟ್ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ವಿಜೇತ ವಿವಿಧ ಗ್ರಾಪಂಗಳ ಒಟ್ಟು 16 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾಸಲಾಯಿತು.
ಇದಕ್ಕೂ ಮುನ್ನ ಜಿಲ್ಲೆಯ 12 ತಾಪಂಗಳಿಂದ ಸ್ಥಳೀಯ ಸಾಂಸ್ಕೃತಿಕ ಕಲೆ, ವೃತ್ತಿ, ಸಮುದಾಯ ಪ್ರತಿಬಿಂಬಿಸುವ ವೇಷಭೂಷಣ ತೊಟ್ಟ ಅಧಿಕಾರಿಗಳು, ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿ ಪ್ರದರ್ಶಿಸಿದರು.ಜಿಪಂ ಆಡಳಿತ ಹಾಗೂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು ಇದ್ದರು.
ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿತ್ತು.