ಸಾರಾಂಶ
ಬೆಳಗಾವಿ ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
₹6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ. ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಆಗ್ರಹಿಸಿದರು.
ರಾಜಕೀಯ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಕೂಡ ರಾಜಕೀಯ ಮಾಡುತ್ತಿದ್ದು, ಕಿವಿ ಮೇಲೆ ಹೂವು ಇಟ್ಟುಕೊಂಡಿಲ್ಲ. ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದ ಅವರು, ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪ ಮಾಡುತ್ತಿವೆ ಎಂದು ಆರೋಪಿಸಿದರು.
136 ಜನ ಕಾಂಗ್ರೆಸ್ ಶಾಸಕರಿದ್ದು, ಸರ್ಕಾರಕ್ಕೆ ಯಾವುದೇ ಆಪತ್ತಿಲ್ಲ. ಸಿದ್ದರಾಮಯ್ಯನವರಂಥ ಧೀಮಂತ ನಾಯಕನ ನಾಯಕತ್ವ ನಮ್ಮ ಪಕ್ಷಕ್ಕಿದ್ದು, ಅವರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನದ್ದಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಗರು ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು-ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಮರ್ಥಿಸಿಕೊಂಡರು.
ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ಅತಿವೃಷ್ಟಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿನ ಜಿಎಸ್‌ಟಿ ಹಣವನ್ನೂ ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ ಎಂದು ಆರೋಪಿಸಿದರು.
ಬೇರೆ ರಾಜ್ಯಗಳ ಚುನಾವಣೆ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದು ಟೀಕಿಸಿದರು.