ವಿಜಯಪುರ: ಕನ್ನಡ ಭಾಷೆ ನಮ್ಮ ಉಸಿರು ಅದರ ಉಳಿವು, ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಚನ್ನರಾಯಪಟ್ಟಣ ಹೋಬಳಿಯ ಯಲಿಯೂರು ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿರುವ ೨೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ತನ್ನದೇ ಆದ ಪೂಜ್ಯನೀಯ ಸ್ಥಾನ ಪಡೆದಿರುವುದು ವಿಶೇಷ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಕವಿಗಳು, ಸಾಹಿತಿಗಳು ರಚಿಸಿರುವ ಪುರಾತನ ಸಾಹಿತ್ಯ, ಕಲೆ ಪರಂಪರೆಯನ್ನು ತೋರಿಸುತ್ತದೆ. ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಶ್ರೀಮಂತ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಹಿನ್ನೆಲೆಯಿದೆ. ಕನ್ನಡ ಭಾಷೆಯ ಪ್ರಾಚೀನತೆ ಮತ್ತು ವೈಭವಕ್ಕೆ ಹಲವಾರು ಐತಿಹಾಸಿಕ ಹಾಗೂ ಪುರಾತನ ಶಾಸನಗಳೇ ಸಾಕ್ಷಿಯಾಗಿವೆ ಎಂದು ತಿಳಿಸಿದರು.ಕನ್ನಡ ಭಾಷೆ ಕೇವಲ ಒಂದು ಭಾಷೆಯಲ್ಲ, ಅದು ನಮ್ಮ ನಾಡಿನ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿದೆ. ಧರ್ಮ, ಜಾತಿ ಹಾಗೂ ಮತಗಳ ಭೇದಭಾವಗಳನ್ನು ಮೀರಿ ಕನ್ನಡ ಭಾಷೆಯನ್ನು ಬೆಳೆಸಬೇಕು. ಪ್ರತಿಯೊಬ್ಬರೂ ಕನ್ನಡವನ್ನು ಪ್ರೀತಿಸುವುದರ ಜೊತೆಗೆ ದೈನಂದಿನ ಬದುಕಿನಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಸಮ್ಮೇಳನಾಧ್ಯಕ್ಷರಾದ ಡಾ.ಎಂ.ಶಿವಕುಮಾರ್ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾಷಾ ಬೆಳವಣಿಗೆಗೆ ಮಾತ್ರವಲ್ಲದೆ, ಸಾಹಿತ್ಯಕ ಚಿಂತನೆ, ಸಾಂಸ್ಕೃತಿಕ ಜಾಗೃತಿ ಹಾಗೂ ಕನ್ನಡಿಗರ ಒಗ್ಗಟ್ಟನ್ನು ಬಲಪಡಿಸುವ ವೇದಿಕೆಗಳಾಗಿವೆ. ಇಂತಹ ಕಾರ್ಯಕ್ರಮಕ್ಕೆ ಸಮ್ಮೇಳನಾಧ್ಯಕ್ಷರಾಗಿ ಮಾತನಾಡುವುದು ನನ್ನ ಪಾಲಿಗೆ ದೊರೆತ ಹೆಮ್ಮೆಯ ಸಂಗತಿ ಅಷ್ಟೇ ಅಲ್ಲ, ದೊಡ್ಡ ಜವಾಬ್ದಾರಿಯು ಆಗಿದೆ ಎಂದು ಹೇಳಿದರು.ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಮರವೇ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ೨೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ.ಶಿವಕುಮಾರ್ ಮೆರವಣಿಗೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಪ ಕಾರ್ಯದರ್ಶಿ ಶಿವಕುಮಾರ್ ಚಾಲನೆ ನೀಡಿದರು.ಪೂರ್ಣ ಕುಂಭ ಕಳಶ ಹೊತ್ತ ಮಹಿಳೆಯರು, ಮಕ್ಕಳು ಮತ್ತು ಕನ್ನಡಾಭಿಮಾನಿಗಳು ವೀರಗಾಸೆ, ಡೊಳ್ಳುಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಸಾಹಿತಿಗಳು, ಶಿಕ್ಷಣ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಹಾಗೂ ಕಲಾವಿದರಿಗೆ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷರಾದ ಶಿವಕುಮಾರ್, ಮಾಜಿ ಸಂಸದರಾದ ನಾರಾಯಣಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಯಲಿಯೂರು ದೇವರಾಜ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಪ್ರಸನ್ನಕುಮಾರ್, ತಾಲೂಕು ಗ್ಯಾರಂಟಿ ಅಧ್ಯಕ್ಷರಾದ ಜಗನ್ನಾಥ್, ವಿಜಯಪುರ ಬ್ಲಾಕ್ ಅಧ್ಯಕ್ಷರಾದ ವೆಂಕಟೇಶ್, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ಜಿಲ್ಲಾ ಪರಿಶಿಷ್ಟ ಪಂಗಡದ ಅಧ್ಯಕ್ಷರಾದ ತತ್ತಮಂಗಲ ರಮೇಶ್ ಸಾಹಿತಿಗಳು, ಕವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕರವೇ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಮತ್ತು ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು.
(ಫೋಟೋ ಕ್ಯಾಫ್ಷನ್)ವಿಜಯಪುರ ಸಮೀಪದ ಯಲಿಯೂರಿನಲ್ಲಿ ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ೨೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷರಾದ ಡಾ.ಎಂ.ಶಿವಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಯಲಿಯೂರು ದೇವರಾಜ್ ಇತರರಿದ್ದರು.
(ಪ್ಯಾನಲ್ ಫೋಟೋ ಕ್ಯಾಫ್ಷನ್)ವಿಜಯಪುರ ಸಮೀಪದ ಯಲಿಯೂರಿನಲ್ಲಿ ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ೨೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿಗಳು, ಶಿಕ್ಷಕರು, ರಂಗಭೂಮಿ ಕಲಾವಿದರನ್ನು ಸನ್ಮಾನಿಸಲಾಯಿತು.