ಸಾರಾಂಶ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸರ್ಕಾರ ಸತ್ತಿದೆ, ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ. ವರ್ಗಾವಣೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ
ಹೊನ್ನಾಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸರ್ಕಾರ ಸತ್ತಿದೆ, ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ. ವರ್ಗಾವಣೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ ಖರ್ಗೆ ಎಲ್ಲ ಇಲಾಖೆಗಳಲ್ಲಿ ಮೂಗು ತೂರಿಸುತ್ತ ರಾಜ್ಯದಲ್ಲಿ ಸೂಪರ್ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಗುತ್ತಿಗೆದಾರ ಸಚಿನ್ ಪಾಂಚಾಳ ಅವರು ಪ್ರಿಯಾಂಕ್ ಖರ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಖರ್ಗೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಈಗಲಾದರೂ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಲ್ಲದೇ, ಕಾಂಗ್ರೆಸ್ ಸರ್ಕಾರ ಏಕಾಏಕಿ ಶೇ.15ರಷ್ಟು ಬಸ್ ದರ ಏರಿಸಿದ್ದು, ಕೂಡಲೇ ಆದೇಶ ಹಿಂಪಡೆಯಿರಿ ಎಂದು ಒತ್ತಾಯಿಸಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ರಾಜ್ಯ ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಪಿ.ಕುಪೇಂದ್ರಪ್ಪ, ರಮೇಶ್ ಗೌಡ ತರಗನಹಳ್ಳಿ, ಅರಕೆರೆ ನಾಗರಾಜ್, ಗಿರೀಶ್, ಶಿವಾನಂದ್, ಕೂಲಂಬಿ ಸಿದ್ದಲಿಂಗಪ್ಪ, ತೊಳಕಿ ಹಾಲೇಶ್, ಪುರಸಭೆ ಮಾಜಿ ಅಧ್ಯಕ್ಷರಾದ ರಂಗನಾಥ್, ಕೆ.ವಿ.ಶ್ರೀಧರ್, ಈರಣ್ಣ, ಅಜ್ಜಯ್ಯ, ಬೇಲಿಮಲ್ಲೂರು ಬೀರಪ್ಪ, ಬಿಜೆಪಿ ಕಾರ್ಯಕರ್ತರು ಇದ್ದರು.