ಸಾರಾಂಶ
ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಭಾಲ್ಕಿಭಗವಂತ ಖೂಬಾ ಎರಡು ಅವಧಿಗೆ ಸಂಸದ, ಕೇಂದ್ರದ ಸಚಿವರಾಗಿದ್ದರೂ ಕೂಡ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳು ಜಾರಿಗೆ ತಂದಿಲ್ಲ. ಅವರ 10 ವರ್ಷದ ವೈಫಲ್ಯ ಜನರಿಗೆ ತಿಳಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (ಬಿಕೆಐಟಿ) ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕೆಲಸದ ಜತೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮತದಾರರಿಗೆ ಪರಿಚಯಿಸಿ ಕಾಂಗ್ರೆಸ್ ಗೆಲ್ಲಿಸುವ ಜಿಮ್ಮೆದಾರಿ ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದರು.ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಮಾತನಾಡಿ, ವಿರೋಧಿಗಳ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಸಂಸದರ 10 ವರ್ಷಗಳ ದುರಾಡಳಿತ ಕುರಿತು ಮತದಾರರಿಗೆ ತಿಳಿಸಿ ಕೊಡಬೇಕು. ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಮತದಾರರಿಗೆ ಪರಿಚಯಿಸಿ ಕಾಂಗ್ರೆಸ್ ಗೆಲ್ಲಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರಕುಮಾರ ಖಂಡ್ರೆ, ನಿರ್ದೇಶಕ ಅಶೋಕರಾವ ಸೋನಜಿ, ಮಹಾತ್ಮ ಗಾಂಧಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ವೈಜಿನಾಥ ಪಾಟೀಲ್, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಮಡಿವಾಳಪ್ಪ ಮಂಗಲಗಿ, ಅಂಬಾದಾಸ ಕೋರೆ ಸೇರಿದಂತೆ ಹಲವರು ಇದ್ದರು.