ಸ್ವಾತಂತ್ರ್ಯ ದಿನ ಹಬ್ಬದ ರೀತಿ ಆಚರಿಸೋಣ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.

| Published : Aug 01 2025, 02:15 AM IST

ಸಾರಾಂಶ

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆ ಸಂಪನ್ನಗೊಂಡಿತು.

ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಲಿವೆ. ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ ಆಕರ್ಷಕ ಕವಾಯತು ನಡೆಯಲಿದ್ದು, ತರಬೇತಿಗೆ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಆಹ್ವಾನ ಪತ್ರಿಕೆಯನ್ನು ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಮಾತ್ರವಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

ಕಳೆದ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದವರು, ಅಂಗಾಂಗ ದಾನಿಗಳು ಸೇರಿದಂತೆ ಮತ್ತಿತರ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸಹ ಗುರುತಿಸಿ, ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಗೌರವಿಸಲಾಗುವುದು ಎಂದರು.

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.