ಸಾರಾಂಶ
ನಮ್ಮ ಹೆಮ್ಮೆಯ ಕರ್ನಾಟಕದ ಭಾಷಾಭಿಮಾನ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ನಾಡಹಬ್ಬವಾಗಿದ್ದು, ಅರ್ಥಪೂರ್ಣವಾಗಿ ಆಚರಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.
ಕನ್ನಡಪ್ರಭ ವಾರ್ತೆ ತಿಪಟೂರು
ನಮ್ಮ ಹೆಮ್ಮೆಯ ಕರ್ನಾಟಕದ ಭಾಷಾಭಿಮಾನ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ನಾಡಹಬ್ಬವಾಗಿದ್ದು, ಅರ್ಥಪೂರ್ಣವಾಗಿ ಆಚರಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿರು, ಸಮಾರಂಭಕ್ಕೆ ಸಂಪನ್ಮೂಲದ ಕೊರತೆ ಎಂದು ನೆಪ ಹೇಳದೇ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಸಮಾರಂಭವನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು. ಕನ್ನಡ ರಾಜ್ಯೋತ್ಸವದಲ್ಲಿ ತಾಲೂಕಿನಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಮಹನೀಯರು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ಕಲೆ ಮತ್ತು ಸಂಸ್ಕೃತಿಗೆ ಮೆರಗು ನೀಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಬೇಕು. ನಾಡಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ದೀಪಾಲಂಕಾರ ಮಾಡಬೇಕು. ನ.1ರಂದು ಬೆಳಿಗ್ಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣ ಮಾಡಬೇಕು ಎಂದರು.
ಸಭೆಯಲ್ಲಿ ತಾ.ಪಂ ಇಓ ಎಚ್.ಎಂ. ಸುದರ್ಶನ್, ಗ್ರೇಡ್-2 ತಹಶೀಲ್ದಾರ್ ಎಸ್.ಕೆ. ಜಗನ್ನಾಥ್, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷಮ್ಮ, ಪಿಡಬ್ಲ್ಯೂಡಿ ಇಲಾಖೆಯ ದಯಾನಂದ್, ಬೆಸ್ಕಾಂ ಇಲಾಖೆಯ ಮನೋಹರ್, ಕೃಷಿ ಇಲಾಖೆಯ ಡಾ.ಎಂ.ಪಿ. ಪವನ್, ಪಶುವೈದ್ಯ ಇಲಾಖೆಯ ಡಾ. ಬಿ.ಕೆ. ನಂದೀಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.