ಮಹನೀಯರ ಜಯಂತಿ ಅದ್ಧೂರಿಯಾಗಿ ಆಚರಿಸೋಣ: ಅಪರ ಜಿಲ್ಲಾಧಿಕಾರಿ ಶಿವಕುಮಾರ

| Published : Jan 05 2024, 01:45 AM IST

ಮಹನೀಯರ ಜಯಂತಿ ಅದ್ಧೂರಿಯಾಗಿ ಆಚರಿಸೋಣ: ಅಪರ ಜಿಲ್ಲಾಧಿಕಾರಿ ಶಿವಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಡಳಿತ ಬೀದರ್‌ ಹಾಗೂ ಎಲ್ಲರೂ ಸೇರಿ ಈ ಮಹಾನ್‌ ಶರಣರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ಶಿವಕುಮಾರ ಶೀಲವಂತ ತಿಳಿಸಿದರು. ಬೀದರ್‌ನಲ್ಲಿ ಶಿವಯೋಗಿ ಸಿದ್ದರಾಮ, ವೇಮನ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ಧತಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ಶಿವಯೋಗಿ ಸಿದ್ದರಾಮ, ಮಹಾಯೋಗಿ ವೇಮನ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿಗಳನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆದ ಶಿವಯೋಗಿ ಸಿದ್ದರಾಮ, ಮಹಾಯೋಗಿ ವೇಮನ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜ.15ರಂದು ಶಿವಯೋಗಿ ಸಿದ್ದರಾಮ ಜಯಂತಿ ಆಚರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿದ್ದರಾಮೇಶ್ವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದವರೆಗೆ ಸಿದ್ದರಾಮೇಶ್ವರ ಭಾವಚಿತ್ರದ ಮೆರವಣಿಗೆ ನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಅಂದು ಸರ್ಕಾರಿ ಅರೆ ಸರ್ಕಾರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.

ಮಹಾಯೋಗಿ ವೇಮನ ಜಯಂತಿ ಜ.19ರಂದು ಆಚರಿಸಲಾಗುತ್ತಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೇಮನರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಅಲ್ಲಾಪುರ ರಸ್ತೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದವರೆಗೆ ವೇಮನರ ಭಾವ ಚಿತ್ರದ ಮೆರವಣಿಗೆ ನಡೆದ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಹೇಳಿದರು.

ಜ.21ರಂದು ನಿಜ ಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಿಸಲಾಗುತ್ತಿದ್ದು, ಅಂದು ಬೆಳಗ್ಗೆ 9.30 ಗಂಟೆಗೆ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಎಲ್ಲರೂ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. 10ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂಬಿಗರ ಚೌಡಯ್ಯನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರವರೆಗೆ ನಡೆದು ವೇದಿಕೆ ಕಾರ್ಯಕ್ರಮ ನಡೆಯಲಿದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.

ಜಿಲ್ಲಾಡಳಿತ ಬೀದರ್‌ ಹಾಗೂ ಎಲ್ಲರೂ ಸೇರಿ ಈ ಮಹಾನ್‌ ಶರಣರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸೋಣ. ಮೆರವಣಿಗೆ ಕಾರ್ಯಕ್ರಮದಲ್ಲಿ ಕಲಾ ತಂಡಗಳ ವ್ಯವಸ್ಥೆ ಕನ್ನಡ ಮತ ಸಂಸ್ಕೃತಿ ಇಲಾಖೆಯಿಂದ ಮಾಡಬೇಕು ಹಾಗೂ ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ನಗರ ಸಭೆ ವತಿಯಿಂದ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಜಗನ್ನಾಥ ಜಮಾದಾರ, ಸುನೀಲ್‌ ಭಾವಿಕಟ್ಟಿ, ಶಿವರಾಜ ಬೆಮಳಖೇಡ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ಶಂಕರ ರೆಡ್ಡಿ, ಸಂಗ್ರಾಮ ರೆಡ್ಡಿ, ಗೋಪಾಲ ರೆಡ್ಡಿ, ಪುಂಡಲಿಕರಾವ್‌, ಗಣೇಶ ಭೋವಿ ಹಾಗೂ ಚಿತ್ರಾ ಸೇರಿದಂತೆ ವಿವಿಧ ಸಮಾಜದ ಹಲವಾರು ಮುಖಂಡರು ಭಾಗವಹಿಸಿದ್ದರು.