ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದರಿಂದ ಚಿಕ್ಕಬಳ್ಳಾಪುರವನ್ನು ಡೆಂಗ್ಯೂ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್ ಮಹೇಶ್ ಕುಮಾರ್ ತಿಳಿಸಿದರು.ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ‘ವಿಶ್ವ ಡೆಂಗ್ಯೂ ನಿಯಂತ್ರಣ ದಿನಾಚರಣೆ’ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಸಮುದಾಯದೊಂದಿಗೆ ಸೇರಿ ‘ಡೆಂಗ್ಯೂ ಜ್ವರವನ್ನು ನಿಯಂತ್ರಿಸೋಣ’ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದರ ಪ್ರಯುಕ್ತ ಇಂದು ಚಿಕ್ಕಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳು ಆಸ್ಪತ್ರೆಯಿಂದ ಅಂಬೇಡ್ಕರ್ ವೃತ್ತದವರೆಗೂ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಡೆಂಗ್ಯೂ, ಚಿಕುನ್ ಗುನ್ಯ ಜ್ವರವು ವೈರಸ್ ನಿಂದ ಉಂಟಾಗುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಗ್ಯೂ, ಚಿಕನ್ ಗುನ್ಯ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಜ್ವರವನ್ನು ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಬಹುದು. ಈಡಿಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತವೆ. ಅಂತಹ ನೀರಿನ ತಾಣಗಳನ್ನು ವಾರಕ್ಕೆ ಒಮ್ಮೆ ನೀರನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು ಎಂದರು.ಮುಂಜಾಗ್ರತೆ ವಹಿಸಿ:
ಎಲ್ಲಾ ನೀರಿನ ತೊಟ್ಟಿಗಳು, ಬ್ಯಾರಲ್, ಡ್ರಮ್ ಗಳಲ್ಲಿ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ದಿನ ಪೂರ್ತಿ ಒಣಗಿಸಬೇಕು. ಪರಿಸರವನ್ನು ಸ್ವಚ್ಛಗೊಳಿಸಿ ಪುನಃ ನೀರು ತುಂಬಿಸಬೇಕು ಮತ್ತು ಎಲ್ಲಾ ನೀರಿನ ಶೇಖರಣೆಗಳನ್ನು ಮುಚ್ಚಬೇಕು. ಮನೆ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಘನ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿ ಪರಿಸರವನ್ನು ಸ್ವಚ್ಛವಾಗಿಡಬೇಕು. ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು ವಿಶೇಷವಾಗಿ ವೃದ್ಧರು, ಗರ್ಭಿಣಿಯರು, ಮಕ್ಕಳು ಸೊಳ್ಳೆ ಪರದೆಯನ್ನು ಬಳಸಬೇಕು. ಡೆಂಗ್ಯೂ, ಚಿಕನ್ ಗುನ್ಯ ರೋಗಿಗಳು ಸಹ ತಪ್ಪದೇ ಸೊಳ್ಳೆಯ ಪರದೆಯನ್ನು ಉಪಯೋಗಿಸಬೇಕು. ಸೊಳ್ಳೆಗಳು ಕಚ್ಚದಂತೆ ಮೈ ತುಂಬ ಬಟ್ಟೆ ಧರಿಸಿ ಸೊಳ್ಳೆ ಬತ್ತಿ, ಮುಲಾಮು, ದ್ರಾವಣ ಹಾಗೂ ಇನ್ನಿತರ ನಿರೋಧಕಗಳನ್ನು ಬಳಸಬೇಕು.ಡೆಂಗ್ಯೂ ಜ್ವರ, ಚಿಕನ್ ಗುನ್ಯಾ ರೋಗಕ್ಕೊಳಪಟ್ಟವರಲ್ಲಿ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ ಈ ಲಕ್ಷಣಗಳು ಕಂಡುಬರಲಿವೆ. ಅಂತಹವರು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳ ವೈದ್ಯರನ್ನು ಸಂಪರ್ಕಿಸಬೇಕು. ಚಿಕಿತ್ಸೆಯು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದರು.
ರಾಷ್ಟ್ರೀಯ ಡೆಂಗ್ಯೂ ದಿನದ ಅಂಗವಾಗಿ ಜಾಗೃತಿ ಜಾಥಾವು ತಾಯಿ ಮಕ್ಕಳ ಆಸ್ಪತ್ರೆಯಿಂದ ಆರಂಭಗೊಂಡು ಅಂಬೇಡ್ಕರ್ ಭವನ, ಜಿಲ್ಲಾ ನ್ಯಾಯಾಲಯ ಮುಂಭಾಗದಿಂದ ಅಂಬೇಡ್ಕರ್ ವೃತ್ತದವರೆಗೂ ಸಾಗಿತು. ಶಿಡ್ಲಘಟ್ಟ ರಸ್ತೆಯ ಬಳಿ ಮಾನವ ಸರಪಳಿಯನ್ನು ರಚಿಸಿ, ಕರಪತ್ರಗಳನ್ನು ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಜಾಗೃತಿ ಫಲಕಗಳನ್ನು ಪ್ರದರ್ಶಿಸುತ್ತಾ ಜಾಗೃತಿ ಜಾಥಾ ಕಾರ್ಯಕ್ರಮವು ಸರ್ಕಾರಿ ಜಿಲ್ಲಾ ಆಸ್ಪತ್ರೆಯವರೆಗೆ ಸಾಗಿತು.ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಹರೀಶ್, ವೈದ್ಯಾಧಿಕಾರಿ ಡಾ.ಉಮಾ, ಡಾ. ಕೃಷ್ಣಪ್ರಸಾದ್, ಡಾ. ಪ್ರಕಾಶ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಅರೆ ವ್ಯೆದ್ಯಕೀಯ ವಿದ್ಯಾರ್ಥಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ಇದ್ದರು.