ಸಿದ್ದರಾಮಯ್ಯ, ಬಿಎಸ್‌ವೈ ದೋಷಮುಕ್ತರಾಗಿ ಹೊರಬರಲಿ: ಆಚಾರ್ಯ ಗುಣಧರನಂದಿ ಮಹಾರಾಜರು

| Published : Sep 23 2024, 01:15 AM IST

ಸಿದ್ದರಾಮಯ್ಯ, ಬಿಎಸ್‌ವೈ ದೋಷಮುಕ್ತರಾಗಿ ಹೊರಬರಲಿ: ಆಚಾರ್ಯ ಗುಣಧರನಂದಿ ಮಹಾರಾಜರು
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಹಾನ್‌ ನಾಯಕರು. ಮುಡಾ ಹಗರಣ, ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ದೋಷಮುಕ್ತರಾಗಿ ಹೊರಬರಲಿ ಎಂದು ಪ್ರಾರ್ಥಿಸುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಹಾನ್‌ ನಾಯಕರು. ಮುಡಾ ಹಗರಣ, ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ದೋಷಮುಕ್ತರಾಗಿ ಹೊರಬರಲಿ ಎಂದು ಪ್ರಾರ್ಥಿಸುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿದೀ ವಿಷಯ ಪ್ರಸ್ತಾಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಂತೆ ಅವರಿಗೆ ಮಾಡಬಾರದು. ಇಳಿವಯಸ್ಸಿನಲ್ಲಿ ಯಡಿಯೂರಪ್ಪ ಅವರ ಮೇಲೆ ಮಾನವೀಯತೆ ಮೀರಿ ಆರೋಪ ಮಾಡುವುದು ಸರಿಯಲ್ಲ. ಈ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ನನಗೆ ಅನಿಸುತ್ತಿಲ್ಲ. ಒಂದು ವೇಳೆ ತಪ್ಪು ಮಾಡಿದ್ದೇ ಆದಲ್ಲಿ ರಾಜ್ಯದ ಜನತೆ ಇಬ್ಬರನ್ನೂ ಕ್ಷಮಾ ಮಾಡಲಿ. ನಮ್ಮಲ್ಲಿ ಈಗ ಕ್ಷಮಾವಳಿ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರಿಗೆ ಕ್ಷಮೆ ಕೋರಿ, ನ್ಯಾಯಾಲಯದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಹವನ, ಯಜ್ಞ ಮಾಡಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಕ್ಷಮಾವಳಿ ದಿನ ಆಚರಿಸಲಿ

ಜೈನ ಸಮಾಜದಿಂದ ನಡೆಯುವ ಕ್ಷಮಾವಳಿ ಪರ್ವ ರಾಷ್ಟ್ರೀಯ ಕಾರ್ಯಕ್ರಮ ಆಗಬೇಕು. ತಪ್ಪು ಮಾಡಿದವರನ್ನು ಕ್ಷಮಿಸುವುದು ದೊಡ್ಡ ಗುಣ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ಷಮಾವಳಿ ದಿನ ಆಚರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಕಠಿಣ ಶಿಕ್ಷೆಯಾಗಲಿ

ಸರ್ವಧರ್ಮಗಳ ಶಕ್ತಿ ಕೇಂದ್ರ ತಿರುಪತಿಯ ಪ್ರಸಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇದಕ್ಕಾಗಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದರು.

ಹೋರಾಟ ಅನಿವಾರ್ಯ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಕೆಲವರು ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಈ ರೀತಿ ಮಾತಾಡುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.