ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಆಗ್ರಹಿಸಿದರು.
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಹ ಪ್ರಕರಣದ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ ಎಂದರು.
ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಸ್ಥಾನದಲ್ಲಿ ಇದ್ದಾಗ ಯಾವುದೇ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಹೇಗೆ ಸಾಧ್ಯ? ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ. ಅವರಿಗೆ ಈ ನೆಲದ ಕಾನೂನಿನ ಮೇಲೆ ಗೌರವ ಇದ್ದರೆ ತಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಿ ಎಂದು ಸವಾಲು ಹಾಕಿದರು.
ಸಿಎಂ ಸಿದ್ದರಾಮಯ್ಯ ನಾವು ಮತ್ತು ನಮ್ಮ ಪಕ್ಷ ಶುದ್ಧ ಹಸ್ತವಾಗಿದೆ ಎಂದು ಬೊಗಳೆ ಬಿಟ್ಟುಕೊಂಡು ಈ ಹಿಂದೆ ಗಣಿ ಹಗರಣ ಕುರಿತು ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಇಂತವರು ಈಗ ಮುಡಾ ಹಗರಣದಲ್ಲಿ ಸಿಲುಕಿ ತಮ್ಮ ಮುಖಕ್ಕೆ ತಾವೇ ಮಸಿ ಬಳಿದುಕೊಂಡಿದ್ದಾರೆ. ಇಂತವರು ಸಾರ್ವಜನಿಕ ಜೀವನದಲ್ಲಿ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಲೇವಡಿ ಮಾಡಿದರು.