ಸಾರಾಂಶ
ಪೋಷಕರ ಶ್ರಮಕ್ಕೆ ತಕ್ಕ ಫಲವನ್ನು ಮಕ್ಕಳು ನೀಡಲಿ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಪ್ರತಿಶತ (125 ಕ್ಕೆ 125) ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹೇಳಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೋಷಕರು ಸಾಕಷ್ಟು ಶ್ರಮಿಸುತ್ತಾರೆ. ಹಲವು ತ್ಯಾಗಗಳನ್ನು ಮಾಡುತ್ತಾರೆ. ಅವರ ಆಶೋತ್ತರಗಳನ್ನು ಈಡೇರಿಸುವ ಮೂಲಕ ಉತ್ತಮ ಸಾಧಕರಾಗುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಿರಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಪರೀಕ್ಷೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಪ್ರತಿಶತ (125 ಕ್ಕೆ 125) ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರನ್ನು ಪ್ರೋತ್ಸಾಹಿಸುವ ಕಾರ್ಯ ಅತ್ಯಂತ ಶ್ಲಾಘನೀಯ. ವಿದ್ಯಾರ್ಥಿಗಳು ಹಾಗೂ ಸಾಹಿತಿಗಳ ಮಧ್ಯೆ ಇಂತಹ ಸಂಭ್ರಮವನ್ನು ಮುಂದಿನ ದಿನಗಳಲ್ಲಿಯೂ ನಡೆಯುವಂತಾಗಬೇಕು. ಇಂದಿನ ಕಾರ್ಯಕ್ರಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದರು.ವಿದ್ಯಾರ್ಥಿಗಳು ನೈತಿಕ ವಿಚಾರಗಳು, ಆದರ್ಶ, ಸಂಸ್ಕಾರ ಮತ್ತು ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದು ನಿಮ್ಮ ಉನ್ನತಿಗೆ ಸಹಾಯ ಮಾಡುತ್ತದೆ. ಅಲ್ಲದೇ ನಿಮ್ಮ ಕನಸಿನ ಗರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ನಿಗದಿತ ಗುರಿಯನ್ನು ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಸಿದ್ದಪ್ಪ ಹೊಟ್ಟಿ ಮಾತನಾಡಿ, ವಿದ್ಯಾರ್ಥಿಗಳಾರು ದಡ್ಡರಲ್ಲ, ಅವರವರ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಸಮಯ ಮತ್ತು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಾಧನೆಗೆ ಏಕಾಗ್ರತೆ ಮುಖ್ಯ ನಿರಂತರ ಅಧ್ಯಯ ನಿರಂತರ ಅಧ್ಯಯನ ತಪಸ್ಸಿನಂತೆ ಮಾಡಬೇಕು ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಬ್ಯಾಗ್, ಪ್ರಶಸ್ತಿ ಪತ್ರ ಹಾಗೂ ಕನ್ನಡದ ಶಾಲು ಹೊದಿಸಿ ಸನ್ಮಾನಿಸಿ, ಪ್ರೋತ್ಸಾಹಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಎಚ್.ಟಿ., ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಪುಜಾರಿ, ತಾಲೂಕು ಕಸಾಪ ಅಧ್ಯಕ್ಷ ವೆಂಕಟೇಶ ಕಲಕಂಭ, ಗುರುಮಠಕಲ್ ತಾಲೂಕು ಕಸಾಪ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಎಂ.ಟಿ. ಪಲ್ಲಿ, ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ, ಸುರಪುರ ತಾಲೂಕು ಕಸಾಪ ಅಧ್ಯಕ್ಷ ಶರಣಬಸಪ್ಪ ಯಳವಾರ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ. ಸಿದ್ದರಾಜರೆಡ್ಡಿ ನಿರೂಪಿಸಿದರು. ಗೌರವ ಕೋಶಾಧ್ಯಕ್ಷ ಬಸವರಾಜ ಮೋಟ್ನಳ್ಳಿ ವಂದಿಸಿದರು.