ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜೂನ್ 12ರಂದು ಜಿಲ್ಲಾ ಕೇಂದ್ರದಲ್ಲಿ ಜಾಗೃತಿ ಜಾಥಾ ಹಾಗೂ ಜಿಲ್ಲೆಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಕಾರ್ಯಪಡೆ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಪ್ಯಾನ್ ಇಂಡಿಯಾ ಕಾರ್ಯಕ್ರಮದಡಿ ಜೂನ್ 1ರಿಂದಲೇ ವಿವಿಧ ಅರಿವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ. ಅದರ ಭಾಗವಾಗಿ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಅರಿವು ಮೂಡಿಸಲು ಕರಪತ್ರ ಮತ್ತು ಬಿತ್ತಿಪತ್ರಗಳ ವಿತರಣೆ ಮಾಡುವುದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳ ಸಹಕಾರವನ್ನು ಪಡೆದು ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಆಯೋಜಿಸುವುದು. ಕೆಲಸದ ಸ್ಥಳಗಳಲ್ಲಿ ಅನಿರೀಕ್ಷಿತ ದಾಳಿಗಳನ್ನು ಕೈಗೊಂಡು ಬಾಲಕಾರ್ಮಿಕತೆಗೆ ಸಿಲುಕಿರುವ ಮಕ್ಕಳನ್ನು ರಕ್ಷಿಸುವ ಮೂಲಕ ಈ ವರ್ಷದ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ವಿಶೇಷವಾಗಿ ಹಾಗೂ ಪರಿಣಾಮಕಾರಿಯಾಗಿ ಆಯೋಜಿಸಬೇಕಾಗಿರುತ್ತದೆ. ಪ್ಯಾನ್ ಇಂಡಿಯಾ ಕಾರ್ಯಕ್ರಮವೂ ಈ ತಿಂಗಳ ಕೊನೆಯವರೆಗೆ ನಡೆಯಲಿದೆ ಎಂದು ತಿಳಿಸಿದರು.
ಜೂನ್ 12ರಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಗೃತಿ ಜಾಥಾವು ನಗರದ ಜೂನಿಯರ್ ಕಾಲೇಜು ಆವರಣದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ತಲುಪಲಿದೆ. ನಂತರ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಮಟ್ಟದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಪರಿಣಾಮಕಾರಿಯಾಗಿ ಆಯೋಜಿಸಲು, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.ಸಭೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘವನ್ನು ನವೀಕರಿಸಲು ಅನುಮೋದನೆ ಪಡೆಯಲಾಯಿತು. 2024-25ನೇ ಸಾಲಿನ ಕಾರ್ಯ ಪ್ರಗತಿಯ ವಿವರವನ್ನು ಮಂಡಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸದಸ್ಯರ ಹಾಗೂ ಕಾರ್ಯಪಡೆಯ ಪ್ರತಿನಿಧಿಗಳ ಸಲಹೆಗಳನ್ನು ಪಡೆಯಲಾಯಿತು. ಬಾಲಕಾರ್ಮಿಕ ಯೋಜನಾ ಸಂಘದ 2023-24ನೇ ಸಾಲಿನ ಅಡಿಟ್ ವರದಿಯ ಕುರಿತು ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳು ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಗೃತಿ ಕರಪತ್ರ, ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್, ನಾಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕಾರ್ಯಪಡೆಯ ಪ್ರತಿನಿಧಿಗಳು ಇದ್ದರು.;Resize=(128,128))
;Resize=(128,128))