ಗ್ಯಾರಂಟಿ ಯೋಜನೆಗಳು ಶೇ.100 ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ

| Published : Aug 28 2024, 12:45 AM IST

ಗ್ಯಾರಂಟಿ ಯೋಜನೆಗಳು ಶೇ.100 ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ
Share this Article
  • FB
  • TW
  • Linkdin
  • Email

ಸಾರಾಂಶ

ಶೇ.100ಪ್ರಗತಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಶ್ರಮಿಸಬೇಕು

ಬಳ್ಳಾರಿ: ರಾಜ್ಯ ಸರ್ಕಾರದ ಅನುಷ್ಠಾನಗೊಳಿಸಿರುವ ಮಹತ್ವದ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಾದ್ಯಂತ ಶೇ.95 ಅನುಷ್ಠಾನಗೊಂಡಿದ್ದು, ಶೇ.100ಪ್ರಗತಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಶ್ರಮಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಸೂಚಿಸಿದರು.ನಗರದ ಕೋಟೆ ಪ್ರದೇಶದ ಜಿಪಂನ ಅಬ್ದುಲ್ ನಜೀರಸಾಬ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ ಗೃಹಿಣಿಯರಿಗೆ, ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಯು ಪಕ್ಷಾತೀತವಾದ ಹಾಗೂ ಜನಪರವುಳ್ಳ ಸಾಮಾಜಿಕ ಕಾರ್ಯಕ್ರಮವಾಗಿದೆ. ಅರ್ಹ ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಇದರ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೆಲ ತಾಂತ್ರಿಕ ಲೋಪದೋಷದಿಂದ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲು ವಿಳಂಬವಾಗುತ್ತಿದೆಯೇ ಹೊರತು ಯಾವುದೇ ಕಾರಣಕ್ಕೂ ನಿಲ್ಲಿಸಲಾಗುವುದಿಲ್ಲ. ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ ₹53 ಸಾವಿರ ಕೋಟಿ ವಿನಿಯೋಗಿಸಲು ಅನುದಾನ ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಾದ್ಯಂತ ಒಟ್ಟು 3,01,180 ಪಡಿತರ ಚೀಟಿದಾರರಿದ್ದು ಗೃಹಲಕ್ಷ್ಮಿ ಯೋಜನೆಯಡಿ 2,77,494 ನೋಂದಣಿಯಾಗಿವೆ. ಈ ಪೈಕಿ ₹601 ಕೋಟಿ ವೆಚ್ಚ ಭರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಇನ್ನುಳಿದ ಅರ್ಹ ಪಡಿತರ ಚೀಟಿದಾರರು ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 3,02,898 ಅರ್ಹ ವಿದ್ಯುತ್ ಬಳಕೆದಾರರಿದ್ದು, ಗೃಹಜ್ಯೋತಿ ಯೋಜನೆಯಡಿ 2,74,775 ಗ್ರಾಹಕರು ನೋಂದಾಯಿಸಿಕೊಂಡಿದೆ. ₹1.20 ಕೋಟಿ ವೆಚ್ಚ ವ್ಯಯವಾಗಿದೆ. ಯೋಜನೆಯಿಂದ ಹೊರಗುಳಿದ ಅರ್ಹ ವಿದ್ಯುತ್ ಗ್ರಾಹಕರಿಗೆ ಮನವೊಲಿಸಬೇಕು. ಅನ್ನಭಾಗ್ಯ ಯೋಜನೆಯಡಿ 31 ಲಕ್ಷ ಫಲಾನುಭವಿಗಳಿಗೆ ₹175 ಕೋಟಿ ವೆಚ್ಚ ಭರಿಸಲಾಗಿದೆ. ಗ್ರಾಹಕರಿಗೆ ಉತ್ತಮ ಗುಣ ಮಟ್ಟದ ಆಹಾರ ಪೂರೈಕೆಯಾಗುವಂತೆ ಜವಾಬ್ದಾರಿ ವಹಿಸಬೇಕು ಎಂದು ಜೆಸ್ಕಾಂ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿದ್ದ ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಮಾತನಾಡಿ, ಸರ್ಕಾರದ ಪ್ರತಿಷ್ಠಿತ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರು ಸುಸ್ಥಿರವಾಗಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.