ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ. 23 ಮತ್ತು 24ರಂದು ನಡೆಯಲಿದ್ದು, ಈ ಪರೀಕ್ಷೆಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅತ್ಯಂತ ಪಾರದರ್ಶಕ ಮತ್ತು ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಕರ್ತವ್ಯ ನಿರ್ವಹಿಸಬೇಕು.
ಕನ್ನಡಪ್ರಭ ವಾರ್ತೆ ಕಾರವಾರ
ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ. 23 ಮತ್ತು 24ರಂದು ನಡೆಯಲಿದ್ದು, ಈ ಪರೀಕ್ಷೆಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅತ್ಯಂತ ಪಾರದರ್ಶಕ ಮತ್ತು ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಒಟ್ಟು 14 ಕೆಂದ್ರಗಳಲ್ಲಿ ನಡೆಯಲಿದ್ದು, 4498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಎಲ್ಲಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವುದರ ಜೊತೆಗೆ ಜಿಪಂನಲ್ಲಿ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಾಗುವುದು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಮೋಬೈಲ್, ಬ್ಲೂಟೂಥ್, ಕ್ಯಾಲ್ಕುಲೇಟರ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು. ಕೇಂದ್ರಗಳ 200 ಮೀಟರ್ ನಿಷೇಧಾಜ್ಞೆ ವಿಧಿಸಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸುವಂತೆ ಸೂಚಿಸಿದ ಅವರು, ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳಿಗೆ ಬಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಮತ್ತು ಬೇಡಿಕೆಗನುಗುಣವಾಗಿ ಬಸ್ ವ್ಯವಸ್ಥೆ ಮತ್ತು ನಿಲುಗಡೆ ವ್ಯವಸ್ಥೆ ಕಲ್ಪಿಸುವಂತೆ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬರದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ, ಜಿಪಂ ಯೋಜನಾ ನಿರ್ದೇಶಕ ಕರೀಂ ಅಸಾದಿ ಇದ್ದರು.