ಸಾರಾಂಶ
ಬಸಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಹದೇಶ್ವರ ವನ್ಯಜೀವಿ ವಲಯದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಹನೂರು: ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ತಮ್ಮ ನೆರೆಹೊರೆ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಎ.ಸಿ.ಎಫ್ ಚಂದ್ರಶೇಖರ್ ಹೇಳಿದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಧಾಮ ಬಫರ್ ಜೋನ್ ವಲಯ ಬಸಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಾವು ಓದಿದ ಶಾಲೆ ಹಾಗೂ ನೆರೆಹೊರೆಯ ಖಾಲಿ ನಿವೇಶನಗಳಿರುವ ಸ್ಥಳಗಳಲ್ಲಿ ಅರಣ್ಯ ಇಲಾಖೆಯಲ್ಲಿ ಸಿಗುವ ವಿವಿಧ ಬಗೆಯ ಗಿಡಗಳನ್ನು ಪಡೆದು ನೆಡಬೇಕು ಎಂದರು.
ಜಾಗತಿಕ ತಾಪಮಾನ ಏರಿಕೆಯಿಂದ ಇತ್ತೀಚಿನ ದಿನಗಳಲ್ಲಿ ತೊಂದರೆ ಅನುಭವಿಸುವಂತೆ ಆಗಿದೆ. ಹೀಗಾಗಿ ಪರಿಸರ ಉತ್ತಮಗೊಳಿಸಲು ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.ವಲಯ ಅರಣ್ಯ ಅಧಿಕಾರಿ ಪ್ರವೀಣ್ ಮಾತನಾಡಿ, ವನಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ತಮ್ಮ ಮನೆ, ಶಾಲೆ ಹಾಗೂ ಇನ್ನಿತರ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಅದನ್ನು ಪೋಷಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ವೀರಪ್ಪ, ಗ್ರಾಪಂ ಸದಸ್ಯರಾದ ಮುತ್ತುರಾಜು, ಸಹ ಶಿಕ್ಷಕರು, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.