ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಮುಖ್ಯಮಂತ್ರಿ ಸಿದ್ದಾರಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಬೇಕು ಹಾಗೂ ಅವರ ಪತ್ನಿಯ ಹೆಸರಲ್ಲಿ ಮಾಡಿರುವ 14 ಸೈಟನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.ಮಂಗಳವಾರ ಪುತ್ತೂರಿನ ಖಾಸಗಿ ಕಾಲೇಜ್ ಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮದೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಪತ್ನಿಯ ಹೆಸರಿನಲ್ಲಿ ಮಾಡಿರುವ ಸೈಟನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಿ ಎಂದು ಈ ಹಿಂದೆಯೇ ಗಿಣಿ ಹೇಳಿದಂತೆ ಹೇಳಿದ್ದೆ. ಆದ್ರೆ ಅವರು ನನ್ನ ಸಲಹೆಯನ್ನು ಕೇಳಲಿಲ್ಲ. ಹಾಗಾಗಿ ಅವರಿಗೆ ಇಂದು ಈ ಪರಿಸ್ಥಿತಿ ಬಂದಿದೆ. ಅವತ್ತೆ ಆ ಸೈಟ್ ಗಳನ್ನ ಹಸ್ತಾಂತರ ಮಾಡಿದ್ದರೆ, ಆ ಪಕ್ಷದ ಎಲ್ಲಾ ಕಳ್ಳರು ಸಿಕ್ಕಿ ಹಾಕಿಕೊಳ್ಳುತ್ತಿದ್ದರು. ಜೊತೆಗೆ ಸೈಟ್ ಗಳನ್ನ ಹಸ್ತಾಂತರ ಮಾಡಿದ್ದರೆ ಮುಖ್ಯಮಂತ್ರಿ ಸ್ಥಾನವೂ ಉಳಿಯುತ್ತಿತ್ತು. ಕಳಂಕ ಮುಕ್ತರಾಗುತ್ತಿದ್ದರು ಎಂದರು. ಈಗ ಮುಖ್ಯಮಂತ್ರಿ ಸ್ಥಾನವನ್ನೇ ಬಿಟ್ಟು ಕೊಡಬೇಕಾದ ಪರಿಸ್ಥಿತಿ ಅವರಿಗೆ ಬಂದಿದೆ. ಇದು ಅವರ ಸ್ವಯಂಕೃತ ಅಪರಾಧ. ಇನ್ನು ವಿಳಂಬ ಮಾಡದೆ ತಕ್ಷಣವೇ ಅವರು ರಾಜೀನಾಮೆ ನೀಡಬೇಕು ಎಂದರು.ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ನಿರಂತರ ಪ್ರತಿಭಟನೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆಗೆ ಸಂದಿರುವ ದೊಡ್ಡ ಗೆಲುವು ಎಂದು ಹೇಳಿದ್ದಾರೆ.