ಎಲ್ಲರಲ್ಲೂ ಸ್ವಚ್ಛತೆಯ ಪ್ರಜ್ಞೆ ಮೂಡಲಿ: ಕಾಗೇರಿ

| Published : Sep 14 2024, 01:56 AM IST

ಸಾರಾಂಶ

. ಸ್ವಚ್ಛತೆ ಮನೋಭಾವ ಪಾಕ್ಷಿಕದ ಅವಧಿಗೆ ಮಾತ್ರ ಸೀಮಿತವಾಗದೇ, ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಪ್ರತಿದಿನವೂ ನಿರಂತರವಾಗಿ ಆಚರಿಸಬೇಕು.

ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲಾದ್ಯಂತ ಸೆ. 17ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸುವಂತೆ ಜನಾಂದೋಲನದ ರೀತಿಯಲ್ಲಿ ಆಯೋಜಿಸಬೇಕೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅವಧಿಯಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪ್ರಮುಖ ಧ್ಯೇಯವಾದ ಸ್ವಭಾವ ಸ್ಚಚ್ಛತೆ ಮತ್ತು ಸಂಸ್ಕಾರ. ಸ್ವಚ್ಛತೆ ಮನೋಭಾವ ಪಾಕ್ಷಿಕದ ಅವಧಿಗೆ ಮಾತ್ರ ಸೀಮಿತವಾಗದೇ, ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಪ್ರತಿದಿನವೂ ನಿರಂತರವಾಗಿ ಆಚರಿಸಬೇಕು ಹಾಗೂ ಇದನ್ನು ದೈನಂದಿನ ಜೀವನದ ಚಟುವಟಿಕೆಯನ್ನಾಗಿ ಮಾಡಿಕೊಳ್ಳಬೇಕು. ಸ್ವಚ್ಛತೆಯ ಕುರಿತಂತೆ ಪ್ರತಿಯೊಬ್ಬರಲ್ಲೂ ನಾಗರಿಕ ಪ್ರಜ್ಞೆ ಮೂಡುವಂತಾಗಬೇಕು ಎಂದರು.ಸ್ವಚ್ಛತಾ ಕಾರ್ಯಕ್ರಮಗಳ ಮೂಲಕ ಪ್ರಕೃತಿಯ ಮೇಲೆ ನಡೆಯುತ್ತಿರುವ ಹಾನಿಯನ್ನು ಮತ್ತು ಮಾಲಿನ್ಯದ ಶೋಷಣೆ ತಡೆಯುವ ನಿಟ್ಟಿನಲ್ಲಿ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಮಾಲಿನ್ಯರಹಿತ ಪರಿಸರವನ್ನು ಕೊಡುಗೆಯನ್ನಾಗಿ ನೀಡುವ ಮಹತ್ತರವಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುವ ಕುರಿತಂತೆ ಕಾರ್ಯಕ್ರಮಗಳನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಸೀಮಿತಗೊಳಿಸದೇ, ಜಿಲ್ಲೆಯ ಎಲ್ಲ ಸ್ವಯಂಸೇವಾ ಸಂಘಟನೆಗಳ ಸಹಕಾರ ಪಡೆದು ವ್ಯಾಪಕ ರೀತಿಯಲ್ಲಿ ಜಾಗೃತಿ ಮೂಡಿಸಿ, ಚಟುವಟಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಗಾಂಧೀ ಜಯಂತಿಯಂದು ಜಿಲ್ಲಾದ್ಯಂತ ಕನಿಷ್ಠ 2 ಗಂಟೆಗಳ ಕಾಲ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ವಾರ್ಡ್, ರಸ್ತೆಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದರು.ಕಸವನ್ನು ಸಂಪನ್ಮೂಲವನ್ನಾಗಿ ಪರಿವತಿಸುವ ಕುರಿತಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸುವ ಚುವಟಿಕೆಗಳನ್ನು ಕೈಗೊಳ್ಳಬೇಕು, ಎಲ್ಲ ಗ್ರಾಪಂಗಳಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲ ಸ್ವಚ್ಛತಾ ಕಾರ್ಮಿಕರಿಗೆ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತಂತೆ ಅವರಿಗೆ ಮಾಹಿತಿ ನೀಡಬೇಕು ಎಂದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಸುಸ್ಥಿರ ಅಭಿವೃದ್ಧಿಯ ಜತೆಗೆ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ವಿಧಾನಪರಿಷತ್ ಶಾಸಕ ಗಣಪತಿ ಉಳ್ವೇಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಮತ್ತಿತರರು ಇದ್ದರು.