ಗದಗ: ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆ ಆಗಬೇಕು. ಈ ಅನುದಾನಡಿ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನಿಗಾ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮುಖ್ಯಂಮತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದರು.ನಗರೋತ್ಥಾನದಡಿ ಬಿಡುಗಡೆಯಾದ ಅನುದಾನ ಹಾಗೂ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಮಾಹಿತಿ ಪಡೆದ ಸಚಿವರು ನಗರೋತ್ಥಾನದಡಿ ಕೈಗೊಳ್ಳಲಾಗುವ ರಸ್ತೆ, ಚರಂಡಿ ಮುಂತಾದ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು.
ಗದಗ ವಿಧಾನಸಭಾ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಅಪೂರ್ಣವಾದಂತಹ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.