ಸಾರಾಂಶ
ರಾಣಿಬೆನ್ನೂರು:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಿ ತ್ವರಿತವಾಗಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಎಸ್‌ಎಫ್‌ಐ ತಾಲೂಕು ಘಟಕದ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಚಾರ್ಯ ಎಸ್.ಕೆ. ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. 23 ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ಹೋರಾಟ ನಡೆಸಿ ಉನ್ನತ ಶಿಕ್ಷಣ ಸಚಿವರ ಜೊತೆಗೆ ಮಾತುಕತೆ ನಡೆಸಿದರು. ಆದರೆ ಅದಕ್ಕೆ ಸಚಿವರು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಅತಿಥಿ ಉಪನ್ಯಾಸಕರ ಒಕ್ಕೂಟವು ತನ್ನ ಅನಿರ್ದಿಷ್ಟಾವಧಿ ಧರಣಿಯನ್ನು ಮುಂದುವರೆಸಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದರು. ಆದಷ್ಟು ಬೇಗ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಉಪನ್ಯಾಸಕರು ಪಾಠ ಮಾಡುವಂತಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಪನ್ಯಾಸಕರೊಂದಿಗೆ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಲಾಗುವುದು. ಆದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಹಠಮಾರಿ ಧೋರಣೆ ಕೈ ಬಿಟ್ಟು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಎಸ್‌ಎಫ್‌ಐ ಮುಖಂಡ ನಾಗರಡ್ಡಿ ಗೋಡಿಹಾಳ ಮಾತನಾಡಿ, ಪ್ರತೀ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡುವ ನೂರಾರು ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ ಸಾಕಷ್ಟು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ಅಗತ್ಯವಿದೆ. ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಿ ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಲು ಮುಂದಾಗಿ ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು ಎಂದರು.ಕಿರಣ ಅಬಲೂರ, ಪ್ರಶಾಂತ ನಾಯ್ಕ, ಮಾಲತೇಶ, ನರಸಿಂಹರಾಜ ಎಂ.ಎಚ್., ಪರಿಮಳ ಎಲ್.ಕೆ., ಸಿಂಧೂ ಎಲ್., ಅಶ್ವಿನಿ ಎನ್., ಕುಸಮಾ ಬಿ.ಕೆ., ರೇಷ್ಮಾ ಎಲ್.ಡಿ., ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.