ಸಾರಾಂಶ
ಹುಬ್ಬಳ್ಳಿ-ಧಾರವಾಡಕ್ಕೆ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವುದರಿಂದ ಬೆಳಗ್ಗೆ ಹಾಗೂ ಸಂಜೆ ಸರಿಯಾಗಿ ಬಸ್ ಓಡಿಸಬೇಕು. ಗ್ರಾಮೀಣ ಪ್ರದೇಶದಲ್ಲೂ ಬಸ್‌ಗಳಿಂದ ತೊಂದರೆ ಆಗಬಾರದು.
ಧಾರವಾಡ:
ರಾಜ್ಯ ಸರ್ಕಾರ ಬಡ ಹಾಗೂ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಇವುಗಳಿಂದ ಜನರ ಬದುಕಿನಲ್ಲಿ ಬೆಳಕು ಮೂಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.ಜಿಲ್ಲಾ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದ ಅವರು, ಹುಬ್ಬಳ್ಳಿ-ಧಾರವಾಡಕ್ಕೆ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವುದರಿಂದ ಬೆಳಗ್ಗೆ ಹಾಗೂ ಸಂಜೆ ಸರಿಯಾಗಿ ಬಸ್ ಓಡಿಸಬೇಕು. ಗ್ರಾಮೀಣ ಪ್ರದೇಶದಲ್ಲೂ ಬಸ್‌ಗಳಿಂದ ತೊಂದರೆ ಆಗಬಾರದೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬ, ಜೋತು ಬಿದ್ದ ತಂತಿಗಳನ್ನು ತಕ್ಷಣ ಸರಿಪಡಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಪಾಟೀಲ, ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವ ಜತೆಗೆ ತಾಲೂಕು ಮಟ್ಟದಲ್ಲೂ ಉದ್ಯೋಗ ಮೇಳ ಆಯೋಜಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಅನ್ನಭಾಗ್ಯ, ಯುವ ನಿಧಿ ಯೋಜನೆಗಳ ಬಾಕಿ ಫಲಾನುಭವಿಗಳಿಗೆ ಪರಿಶೀಲಿಸಿ ಶೀಘ್ರ ಸೌಲಭ್ಯ ಕಲ್ಪಿಸಬೇಕು. ಅಧಿಕಾರಿಗಳು ಜನಪರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಬೇಕೆಂದು ತಿಳಿಸಿದರು.
ಪ್ರಾಧಿಕಾರದ ಉಪಾಧ್ಯಕ್ಷರಾದ ಮುರಗಯ್ಯ ವಿರಕ್ತಮಠ, ಅರವಿಂದ ಏಗನಗೌಡರ, ಸುಧೀರ ಗೋಳಾರ, ಅಬ್ದುಲ್ ರಶೀದ್ ಬೋಳಾಬಾಯಿ, ರತ್ನಾ ತೇಗೂರಮಠ ಸಭೆಯಲ್ಲಿದ್ದರು.