ಸಾರಾಂಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ರಾಜ್ಯ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಜನರಿಗೆ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ಅಧಿಕಾರಿಗಳು ಮತ್ತು ಸಮಿತಿಯ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.ನಗರದ ತಾಲೂಕು ಪಂಚಾಯಿತಿಯಲ್ಲಿ ಸರಕಾರದ ನಿರ್ದೇಶನದ ಮೇರೆಗೆ ಕೊಪ್ಪಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಕಾರ್ಯಾಲಯ ಪ್ರಾರಂಭಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ರಾಜ್ಯ ಸರಕಾರದ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು, ಮೂರು ಹಂತದ ಸಮಿತಿಯನ್ನು ರಚಿಸಲಾಗಿದೆ. 98% ಜನರಿಗೆ ಸೌಲಭ್ಯ ಸಿಕ್ಕಿದ್ದು, ಕೆಲವರಿಗೆ ತಾಂತ್ರಿಕ ಕಾರಣಗಳಿಂದ ಸೌಲಭ್ಯ ಬಂದಿಲ್ಲ. ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಸರಿ ಮಾಡಲಾಗುವದು ಎಂದು ವಿಶ್ವಾಸ ವ್ಯಕ್ತಪಡಿಸಿದರು.ಗ್ಯಾರಂಟಿ ಯೋಜನೆಗಳು ಐದು ವರ್ಷ ಪಕ್ಕಾ ಗ್ಯಾರಂಟಿ ಇರುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳನ್ನು ಸಹ ನಂಬಬೇಡಿ ಎಂದರು.
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೇಲ್, ಸದಸ್ಯ ಕಾರ್ಯದರ್ಶಿಗಳಾದ ದುಂಡಪ್ಪ ತುರಾದಿ, ಸದಸ್ಯರಾದ ಜ್ಯೋತಿ ಮಂಜುನಾಥ ಗೊಂಡಬಾಳ, ದೇವರಾಜ ನಡುವಿನಮನಿ, ರಾಮಣ್ಣ ಚೌಡ್ಕಿ ಹಟ್ಟಿ, ಪರಶುರಾಮ ಕೊರವರ, ಅಶೋಕ ಗೋರಂಟ್ಲಿ, ಆನಂದಪ್ಪ ಕಿನ್ನಾಳ, ಲಕ್ಷ್ಮಣ ಡೊಳ್ಳಿನ್ ಮತ್ತು ಮಾನವಿ ಪಾಶಾ, ರಮೇಶ ಹ್ಯಾಟಿ ಭಾಗ್ಯನಗರ, ತಹಸೀಲ್ದಾರರಾದ ವಿಠ್ಠಲ ಚೌಗಲಾ, ಸಿಡಿಪಿಒ ಜಯಶ್ರೀ, ಕೆಇಬಿ ಎಇಇ ಸಲೀಂ, ಕೆಇಬಿ ಮುನಿರಾಬಾದಿನ ಸಂತೋಷ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜು. 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ಪರಿಗಣಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜಿ ಆಗಬಹುದಾದ ಎಲ್ಲ ತರಹದ ಪ್ರಕರಣಗಳನ್ನು ಜು. 13ರಂದು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಅದಾಲತ್ ಏರ್ಪಡಿಸಲಾಗಿದೆ.ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ. ಚಂದ್ರಶೇಖರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲಕಾರಿ ರಾಮಪ್ಪ ಒಡೆಯರ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.