ಸಾರಾಂಶ
- ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸೂಚನೆ । ಡಿಸಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಸಿದ್ಧತಾ ಸಭೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಜಿಲ್ಲಾ ಆಡಳಿತದಿಂದ ಆ.15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನೋತ್ಸವ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ನೆರವೇರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಎಲ್ಲ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರ‍್ಯ ದಿನಾಚರಣೆ ರಾಷ್ಟ್ರೀಯ ಹಬ್ಬವಾಗಿದೆ. ಎಲ್ಲ ಸರ್ಕಾರಿ ಕಚೇರಿ, ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿಗಳಲ್ಲಿ ಆಚರಣೆ ಮಾಡಬೇಕು. ಅಂದು ರಾಷ್ಟ್ರ ಧ್ವಜಾರೋಹಣ ವೇಳೆ ಧ್ವಜಸಂಹಿತೆ ಕಡ್ಡಾಯವಾಗಿ ಪಾಲನೆ ಮಾಡಬೇಕು. ರಾಷ್ಟ್ರಧ್ವಜಕ್ಕೆ ಎಲ್ಲಿಯೂ ಚ್ಯುತಿಬಾರದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಧ್ವಜಗಳನ್ನು ಬಳಕೆ ಮಾಡಬಾರದು ಎಂದರು.
ಕೇಂದ್ರ ಸ್ಥಾನ ಬಿಡುವಂತಿಲ್ಲ:ಜಿಲ್ಲಾ ಉಸ್ತುವಾರಿ ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡುವರು. ಆಯಾ ಶಾಲಾ, ಕಾಲೇಜು, ಕಚೇರಿಗಳಲ್ಲಿ ಬೆಳಗ್ಗೆ 7.30 ರೊಳಗೆ ಕಾರ್ಯಕ್ರಮ ಮುಗಿಸಿಕೊಂಡು, ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು, ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ರಾಷ್ಟ್ರೀಯ ಹಬ್ಬದಂದು ರಜೆ ಇದೆ ಎಂದು ಕೇಂದ್ರ ಸ್ಥಾನ ಬಿಡಬಾರದು ಎಂದೂ ತಾಕೀತು ಮಾಡಿದರು.
ಧ್ವಜಾರೋಹಣ ನಂತರ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ದೇಶಭಕ್ತಿ ಭಾವ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ವಸತಿ ಶಾಲೆ ವಿದ್ಯಾರ್ಥಿಗಳಿಂದಲೂ ಕಾರ್ಯಕ್ರಮ ಆಯೋಜಿಸಲು ಮತ್ತು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಮೂಲಕ ಎಲ್ಲ ಆಹ್ವಾನಿತರಿಗೆ ಸಕಾಲದಲ್ಲಿ ಆಹ್ವಾನ ಪತ್ರಿಕೆ ತಲುಪಿಸಲು ತಿಳಿಸಿದರು.ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿವೆ. ಕಾರ್ಯಕ್ರಮದ ಸಿದ್ಧತೆಗಾಗಿ ನೇಮಕ ಮಾಡುವ ಉಪ ಸಮಿತಿ ಸದಸ್ಯರು ಕಾರ್ಯೋನ್ಮುಖರಾಗಲು ತಿಳಿಸಿದರು.
ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ರಾಷ್ಟ್ರೀಯ ದಿನ ಕಾರ್ಯಕ್ರಮಗಳಲ್ಲಿ ಏರ್ಪಡಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
- - -ಕೋಟ್ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವೂ ಇರಬೇಕು. ಈ ಬಗ್ಗೆ ಎಲ್ಲ ಶಾಲಾ, ಕಾಲೇಜುಗಳು, ಗ್ರಾಮ ಪಂಚಾಯಿತಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು
- ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ- - - -30ಕೆಡಿವಿಜಿ40ಃ:
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಸ್ವಾತಂತ್ರ‍್ಯ ದಿನ ಪೂರ್ವಭಾವಿ ಸಭೆ ನಡೆಯಿತು.