ಧಾರವಾಡ:
ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವೆಯ ಪಾತ್ರ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ ವಕೀಲರ ಮೇಲಿದೆ. ಕಕ್ಷಿದಾರರು ನ್ಯಾಯದ ಮೇಲೆ ವಿಶ್ವಾಸವಿಟ್ಟು ನ್ಯಾಯಾಲಯಕ್ಕೆ ಬಂದಾಗ ಅವರಿಗೆ ನ್ಯಾಯ ಒದಗಿಸುವುದು ವಕೀಲರ ಕರ್ತವ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ ಹೇಳಿದರು.ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ವಿವಿ ಸಹಯೋಗದಲ್ಲಿ ತರಗತಿಯಿಂದ ನ್ಯಾಯಾಲಯದ ಕೋಣೆಗೆ 4ನೇ ವಲಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ವಕೀಲರಾಗುವ ಕಾನೂನು ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ. ಎಲ್‌ಎಲ್‌ಬಿ ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯ ಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಲಹೆ ನೀಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನೊಂದವರು, ವಿಧವೆಯರು ಹಾಗೂ ಅನ್ಯಾಯಕ್ಕೆ ಒಳಗಾದವರ ಪರವಾಗಿ ನಿಂತು ಅವರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದ ಅವರು, ದೇಶದ ವಿವಿಧ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ವಿದ್ಯಾರ್ಥಿಗಳು ಕಾನೂನು ಶಿಕ್ಷಣ ಪಡೆಯುವ ಜತೆಗೆ ಸಾಮಾಜಿಕ ಜವಾಬ್ದಾರಿ ಅರಿಯಬೇಕೆಂದರು.ರಾಜ್ಯ ಕಾನೂನು ವಿವಿ ಕುಲಪತಿ ಪ್ರೊ. ಸಿ. ಬಸವರಾಜು ಮಾತನಾಡಿ. ಮುಂದಿನ ದಿನಗಳಲ್ಲಿ ವಕೀಲರು ಹಾಗೂ ಕಾನೂನು ತಜ್ಞರಾಗಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಗುರಿ ಹೊಂದಬೇಕು. ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ನೀತಿ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಕಾನೂನು ಎಲ್ಲರಿಗೂ ಒಂದೇ ಎಂಬ ಅರಿವು ಮೂಡಿದಾಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸಮಾನತೆ ನೆಲೆಸಲು ಸಾಧ್ಯ ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಮಾತನಾಡಿ. ಸಾರ್ವಜನಿಕ ಸೇವಕರು ಕಾನೂನಿನ ಅರಿವು ಹೊಂದಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು. ಭವಿಷ್ಯದ ವಕೀಲರು ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತರಾಗಿದ್ದು, ಕಕ್ಷಿದಾರರಿಗೆ ನ್ಯಾಯ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನ್ಯಾಯಾಧೀಶರಾದ ಅನು ಶಿವರಾಮನ್, 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪೂರ್ಣಿಮಾ ಪೈ ಇದ್ದರು. ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ವಂದಿಸಿದರು. ಎಚ್. ಶಶಿಧರ, ಕೃಷಿ ವಿವಿ ಪ್ರಭಾರಿ ಕುಲಪತಿ ಡಾ.ಪಿ.ಯು. ಕೃಷ್ಣರಾಜ್ ಇದ್ದರು.