ಸಾರಾಂಶ
ತಂಬಾಕು ಉತ್ಪನ್ನಗಳ ವ್ಯಾಪಾರಕ್ಕಾಗಿ ರೂಪಿಸಿರುವ ಪ್ರತ್ಯೇಕ ಪರವಾನಗಿ ನೀತಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಕಾರವಾರ: ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯ ಸಾರ್ವಜನಿಕರಿಗೆ ನೀಡುತ್ತಿರುವ ಎಲ್ಲ ವಿಧದ ವೈದ್ಯಕೀಯ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಹಾಗೂ ಆರೋಗ್ಯ ಸೇವೆಗಳು ಎಲ್ಲ ವಯೋಮಾನದವರಿಗೂ ತಲುಪಿಸುವ ರೀತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಅಂಗನವಾಡಿಯಿಂದ ಪ್ರೌಢಶಾಲೆಗಳಲ್ಲಿರುವ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯ ನಿಗದಿತ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ವಿದ್ಯಾರ್ಥಿಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿ, ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಎಲ್ಲ ವಿದ್ಯಾರ್ಥಿಗಳಿಗೆ ನಿಗದಿತ ಲಸಿಕೆಗಳನ್ನು ತಪ್ಪದೇ ನೀಡಿ, ಯಾವುದೇ ವಿದ್ಯಾರ್ಥಿ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರವಹಿಸಿ ಎಂದರು.ವಿವಿಧ ಸಾಂಕ್ರಾಮಿಕ ರೋಗಗಳು ಮತ್ತು ಇತರ ಕಾಯಿಲೆಗಳ ಕುರಿತು ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಜಿಲ್ಲೆಯ ಎಲ್ಲ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಹಾಗೂ ನಿಗದಿತ ಲಸಿಕಾ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಸೂಚಿಸಿದರು. ಯಾವುದೇ ಕೊರತೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.ತಂಬಾಕು ಉತ್ಪನ್ನಗಳ ವ್ಯಾಪಾರಕ್ಕಾಗಿ ರೂಪಿಸಿರುವ ಪ್ರತ್ಯೇಕ ಪರವಾನಗಿ ನೀತಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ. ಜಿಲ್ಲೆಯ ಪ್ರವಾಸಿ ತಾಣಗಳನ್ನು ತಂಬಾಕುಮುಕ್ತ ಟೂರಿಸಂ ಪ್ರದೇಶಗಳು ಎಂದು ಘೋಷಣೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಮಂಕಿಪಾಕ್ಸ್ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಜಿಲ್ಲಾ ಸರ್ಜನ್ ಶಿವಾನಂದ ಕುಡ್ತಳಕರ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ. ಸಿದ್ದಲಿಂಗಯ್ಯ ಮತ್ತಿತರರು ಇದ್ದರು.