ಸಾರಾಂಶ
ಕೇಂದ್ರ ಸರ್ಕಾರದ ನಿಷ್ಕಾಳಜಿ ಹಾಗೂ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗಿದೆ.
ಬಳ್ಳಾರಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ ಭ್ರಷ್ಟಾಚಾರದ ಕಾರಣವೊಡ್ಡಿ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಯಿತು.ಕೇಂದ್ರ ಸರ್ಕಾರದ ನಿಷ್ಕಾಳಜಿ ಹಾಗೂ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗಿದೆ. ಇದರಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವಾಗಿ ಪರಿಣಮಿಸಿದೆ. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಬೇಕು. ಈ ಹಗರಣದಲ್ಲಿ ಪಾಲ್ಗೊಂಡವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ನೀಟ್ ಪರೀಕ್ಷೆ ಫಲಿತಾಂಶದ ಪಾರದರ್ಶಕತೆಯ ಬಗ್ಗೆ ದೇಶ ವ್ಯಾಪಿಯಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಅನೇಕ ಪ್ರಶ್ನೆಗಳನ್ನು ಎತ್ತಿದ್ದಾರೆ. ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕ ಗಳಿಸಿದ್ದಾರೆ. ಪರೀಕ್ಷೆ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ. ಅದರೂ ಸಮರ್ಪಕವಾದ ತನಿಖೆ ನಡೆಸಿಲ್ಲ ಎಂಬ ಆರೋಪವು ಇದೆ. ಇದರ ಕುರಿತು ಸೂಕ್ತ ನ್ಯಾಯಾಂಗ ತನಿಖೆ ಮಾಡಬೇಕು. ನೀಟ್ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ, ಉಪಾಧ್ಯಕ್ಷೆ ಎಂ.ಶಾಂತಿ, ಉಮಾ, ಪ್ರಮೋದ್, ನಿಹಾರಿಕಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಕೆಲ ಹೊತ್ತು ಧರಣಿ ನಡೆಸಿದರು. ಬಳಿಕ ಕೇಂದ್ರ ಸರ್ಕಾರಕ್ಕೆ ಬರೆದ ಮನವಿಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.