ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಲಕ್ಷ್ಮೀಪ್ರಿಯಾ

| Published : Feb 20 2025, 12:47 AM IST

ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಲಕ್ಷ್ಮೀಪ್ರಿಯಾ
Share this Article
  • FB
  • TW
  • Linkdin
  • Email

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಕಾರವಾರ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,974 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದು, 34 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಎಲ್ಲ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ತಹಸೀಲ್ದಾರ್, ಬಿಇಒ ಮತ್ತು ಹಿರಿಯ ಪ್ರಾಂಶುಪಾಲರನ್ನು ಒಳಗೊಂಡ 14 ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಈ ತಂಡದ ಸದಸ್ಯರು ನಿಗದಿತ ಅವಧಿಯೊಳಗೆ ಪ್ರಶ್ನೆಪತ್ರಿಕೆಗಳನ್ನು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು ಎಂದರು.

ಪರೀಕ್ಷಾ ಮಂಡಳಿಯ ನಿರ್ದೇಶನದಂತೆ ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮತ್ತು ಸಿಸಿ ಕ್ಯಾಮೆರಾ ಆಡಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವುದು ಮತ್ತು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವ ಕಾರ್ಯಗಳನ್ನು ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಮತ್ತು ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಪೊಲೀಸ್‌ ಭದ್ರತೆ ನೀಡುವಂತೆ ಮತ್ತು ಕಾರವಾರ ಮತ್ತು ಶಿರಸಿ ಖಜಾನೆಗಳಿಗೆ ಕಡ್ಡಾಯವಾಗಿ 24*7 ಪೊಲೀಸ್‌ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಮಂಡಳಿಯಿಂದ ಸಂಚಾರಿ ಜಾಗ್ರತ ದಳ, ಸ್ಥಾನಿಕ ಜಾಗೃತ ದಳ ನೇಮಕ ಮಾಡಲಾಗಿದ್ದು, ಕೇಂದ್ರಗಳಲ್ಲಿ ಪ್ರತಿ ಕೊಠಡಿಯಲ್ಲಿ ನಿಗದಿತ ವಿದ್ಯಾರ್ಥಿಗಳ ಸಂಖ್ಯೆ, ನೋಂದಣಿ ಸಂಖ್ಯೆಗಳನ್ನು ಹಾಕಬೇಕು. ಕೊಠಡಿಗಳಲ್ಲಿ ಸಾಕಷ್ಟು ಗಾಳಿ, ಬೆಳಕು ಹಾಗೂ ಶುಚಿತ್ವದಿಂದ ಇರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸರಬರಾಜುದಾರರನ್ನು ನೇಮಿಸಿಕೊಳ್ಳಲು ನಿಷೇಧಿಸಿದ್ದು, ಪ್ರತಿ ಕೊಠಡಿಯ ಹೊರಗಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಅಧೀಕ್ಷಕರನ್ನೊಳಗೊಂಡಂತೆ ಎಲ್ಲ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಗುರುತಿನ ಚೀಟಿ

ಧರಿಸಬೇಕು. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲು 200 ಮೀ. ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚುವಂತೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಹೆಸ್ಕಾಂ ಇಲಾಖೆಗೆ ಹಾಗೂ ಪರೀಕ್ಷಾ ದಿನದಂದು ಸುವ್ಯವಸ್ಥಿತವಾಗಿ ಸಾರಿಗೆ ವ್ಯವಸ್ಥೆಯನ್ನು ನಿರ್ವಹಿಸಲು ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಇದ್ದರು.