ಮತದಾನ ಜಾಗೃತಿ ಕಾರ್ಯಕ್ರಮ ನಿರಂತರ ನಡೆಯಲಿ: ಜಿಪಂ ಸಿಇಒ ಸದಾಶಿವಪ್ರಭು

| Published : Apr 07 2024, 01:52 AM IST

ಸಾರಾಂಶ

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ಹೊಸಪೇಟೆ: ಉತ್ತಮ ಸಮಾಜಕ್ಕಾಗಿ ಮತದಾರರು ವೋಟ್ ಹಾಕುವುದು ಅವಶ್ಯಕತೆಯಿದೆ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಸರಿಯಾಗಿ ಮನವರಿಕೆ ಮಾಡಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಜಿಪಂ ಸಿಇಒ ಸದಾಶಿವಪ್ರಭು ಬಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ನಗರಸಭೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಜಿಲ್ಲಾ ಆರೋಗ್ಯಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗು ಹೊಸಪೇಟೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಜಿಪಂ ಕಚೇರಿ ಸಭಾಂಗಣದಲ್ಲಿ ಶನಿವಾರ ವಿಶೇಷ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಇನ್ಮುಂದೆ ಸಹ ವಿನೂತನವಾಗಿ ಜನರಿಗೆ ಮತದಾನದ ಜಾಗೃತಿ ಮೂಡಿಸಲು ಹೆಚ್ಚಿನ ಕಾಳಜಿ ಮತ್ತು ಜವಾಬ್ದಾರಿ ವಹಿಸಬೇಕು ಎಂದು ಸಭೆಯಲ್ಲಿ ಪಾಲ್ಗೊಂಡ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸಿಇಒ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಜಯನಗರ ಜಿಲ್ಲೆಯ ಆರು ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಆಯಾ ಇಲಾಖೆಗಳಿಂದ ಚುನಾವಣಾ ಜಾಗೃತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದರು.

ಭಾರತವು ಪ್ರಪಂಚದಲ್ಲೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ದೇಶವಾಗಿದೆ. ಇದನ್ನು ಪ್ರತಿಯೊಬ್ಬರು ಅರಿಯಬೇಕು. ಮತದಾನ ಮಾಡುವಲ್ಲಿ ಜನರು ನಿರ್ಲಕ್ಷ್ಯ ತೋರಬಾರದು. 18 ವರ್ಷ ಮೇಲ್ಪಟ್ಟ ಯುವಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಲು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದ್ದು, ಈ ಪ್ರಯುಕ್ತ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿ ಪರಸ್ಪರ ಸಮನ್ವಯತೆಯಿಂದ ಇಲಾಖೆಗಳು ಮತದಾರರ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಚಟುವಟಿಕೆಗಳ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಖಾನೆ ಸೇರಿದಂತೆ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ನೌಕರರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಆಯಾ ಕಡೆಗಳಲ್ಲಿ ವಿನೂತನ ರೀತಿಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ದೊಡ್ಡಮಟ್ಟದಲ್ಲಿ ಆಯೋಜಿಸುವಂತೆ ಸಿಯೊ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.