ದೇಶದ ಪ್ರತಿಯೊಬ್ಬ ಪ್ರಜೆಯ ಸ್ವಾಭಿಮಾನ ಸಂಕೇತವಾಗಿರುವ ನಮ್ಮ ಸಂವಿಧಾನವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ದೇಶದ ಪ್ರತಿಯೊಬ್ಬ ಪ್ರಜೆಯ ಸ್ವಾಭಿಮಾನ ಸಂಕೇತವಾಗಿರುವ ನಮ್ಮ ಸಂವಿಧಾನವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಉಳಿಸಿಕೊಳ್ಳೋಣ. ಅದರ ಅಸ್ತಿತ್ವಕ್ಕೆ ಧಕ್ಕೆ ತರಲು ಪ್ರಯತ್ನಿಸುವವರಿಗೆ ತಕ್ಕ ಉತ್ತರ ನೀಡುವ ಶಕ್ತಿಯುತ ಯುವಕರು ನೀವಾಗಬೇಕು. ಇಂದಿನ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ನಿರ್ಣಾಯಕರಾಗಿದ್ದಾರೆ ಎಂದು ಹೇಳಿದರು.

ಸಂವಿಧಾನ ಜಾಗೃತಿ ಪ್ರತಿಯೊಬ್ಬರ ಮನದಲ್ಲೂ ಅಚ್ಚೊತ್ತಬೇಕು. ಸಂವಿಧಾನ ಅರಿವು ಪ್ರತಿ ಪ್ರಜೆಯ ಕರ್ತವ್ಯವಾಗಬೇಕು. ಆ ಆಶಯವನ್ನು ಸಾಕಾರಗೊಳಿಸುವ ದೃಷ್ಟಿಯಿಂದಲೇ ಸಂವಿಧಾನ ದಿನ ಆಚರಿಸಲಾಗುತ್ತಿದೆ. ಸಂವಿಧಾನ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ಸಮಾನವಾಗಿ ವಿತರಿಸುವುದು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಿಸುವುದಾಗಿದೆ. ದೇಶಕ್ಕೆ ಯಾರು ಹಿತವರೋ, ಯಾರು ಶಕ್ತರೋ, ಯಾರು ಸರ್ವರನ್ನೂ ಪ್ರೀತಿಯಿಂದ ಕಾಣುತ್ತಾರೋ ಅಂತವರನ್ನು ಆರಿಸಿಕೊಳ್ಳಿ ಎಂದು ಹೇಳಿದರು.

ಸಂವಿಧಾನ ಆಶಯದಂತೆ ಬಡವರು ಅನ್ನಕ್ಕಾಗಿ ಯಾರ ಮುಂದೆಯೂ ಕೈಚಾಚಬಾರದು ಎಂದು ಅನ್ನಭಾಗ್ಯ ಯೋಜನೆ ನೀಡಿ ಸರ್ಕಾರ ಅವರಿಗೆ ಸ್ವಾಭಿಮಾನದ ಜೀವನ ಕಟ್ಟಿಕೊಟ್ಟಿದೆ. ಎಲ್ಲರ ಮನೆಯಲ್ಲಿ ಬೆಳಕಿರುವಾಗ ಕತ್ತಲಲ್ಲಿ ಕುಳಿತ ಬಡವನ ಸ್ಥಿತಿ ನೋಡಿ ಗೃಹಜ್ಯೋತಿ ಯೋಜನೆ ನೀಡಲಾಗಿದೆ.. ನಮ್ಮ ಅಕ್ಕ ತಂಗಿಯರು ಇವತ್ತು ಎಲ್ಲಿ ಬೇಕಾದರೂ ಮುಕ್ತವಾಗಿ ಸಂಚರಿಸುವಂತೆ ಶಕ್ತಿ ಯೋಜನೆ ಬಲ ನೀಡಿದೆ. ಬಲಿಷ್ಠವಾದ ನಮ್ಮ ಸಂವಿಧಾನ ಉಳಿಸಿ ಬೆಳೆಸುವ ಕೆಲವಾಗಬೇಕು ಎಂದು ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಸಂಪತ್ ಲಮಾಣಿ ಉಪನ್ಯಾಸ ನೀಡಿದರು.ಜಿಲ್ಲಾಧಿಕಾರಿ ಸಂಗಪ್ಪ ಸಂವಿಧಾನ ಪೀಠಿಕೆ ಬೋಧಿಸಿದರು. ಸಂವಿಧಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಭಾಷಣ, ಚಿತ್ರಕಲೆ ಹಾಗೂ ಛಾಯಾಚಿತ್ರ ಸ್ಪಧೆಗಳಲ್ಲಿ ವಿಜೇತರನ್ನು ಹಾಗೂ 2025ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅನಿಕುಮಾರ ದಿಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಸಮಾಜ ಕಲ್ಯಾಣ ಇಲಖೆ ಉಪನಿರ್ದೇಶಕ ರಮೇಶ ಚವ್ಹಾಣ, ತಹಸೀಲ್ದಾರ ವಾಸುದೇವಸ್ವಾಮಿ ಸೇರಿದಂತೆ ಇತರರು ಇದ್ದರು.

ಸಂವಿಧಾನ ಜಾಥಾ ಮೆರವಣಿಗೆ:

ಕಾರ್ಯಕ್ರಮದ ಮುಂಚೆ ಸಂವಿಧಾನ ದಿನಾಚರಣೆ ನಿಮಿತ್ತ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೂ ಮಾಲಾರ್ಪಣೆ ಅರ್ಪಿಸಿ ಸಂವಿಧಾನ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಎಲ್.ಐ.ಸಿ ಕಚೇರಿ ಮೂಲಕ ಡಾ.ಬಿ.ಆರ್. ಅಂಬೇಡ್ಕರ್‌ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಪಾಲ್ಗೊಂಡಿದ್ದವು. ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ ಸೇರದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.