ಕನ್ನಡಪ್ರಭ ವಾರ್ತೆ ಸಕಲೇಶಪುರ

ತಾಲೂಕಿನ ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಒಟ್ಟು 1.34 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಎರಡು ಪ್ರಮುಖ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.ವಿವೇಕಾನಂದ ಬಡಾವಣೆಯಿಂದ ಪ್ರಕೃತಿ ಬಡಾವಣೆಯವರೆಗೆ 86 ಲಕ್ಷ ರು. ವೆಚ್ಚದ ನೂತನ ರಸ್ತೆ ನಿರ್ಮಾಣ ಹಾಗೂ ಹಡ್ಲಳ್ಳಿಯಿಂದ ಕಿರ್ಕಳ್ಳಿ ಗ್ರಾಮದವರೆಗೆ ೪೮ ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಈ ಎರಡು ರಸ್ತೆ ಕಾಮಗಾರಿಗಳು ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದು, ಹಲವು ವರ್ಷಗಳಿಂದ ರಸ್ತೆ ಸಮಸ್ಯೆಯಿಂದ ಬಳಲುತ್ತಿದ್ದ ಜನರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಕೆಸರುಮಯ ರಸ್ತೆ,ಗುಂಡಿಗಳು, ಹದಗೆಟ್ಟ ಸಂಚಾರ ವ್ಯವಸ್ಥೆಯಿಂದ ಶಾಲಾ ಮಕ್ಕಳು, ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ವಾಹನ ಸಂಚಾರಕ್ಕೂ ಅನೇಕ ಬಾರಿ ಅಡಚಣೆ ಉಂಟಾಗುತ್ತಿತ್ತು. ವಿವೇಕಾನಂದ ಬಡಾವಣೆಯಿಂದ ಪ್ರಕೃತಿ ಬಡಾವಣೆಯವರೆಗೆ ನಿರ್ಮಾಣವಾಗಲಿರುವ 86 ಲಕ್ಷ ವೆಚ್ಚದ ರಸ್ತೆ ಸ್ಥಳೀಯ ನಿವಾಸಿಗಳಿಗೆ ಬಹಳ ಅನುಕೂಲವಾಗಲಿದೆ. ಬಡಾವಣೆ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ದಿನನಿತ್ಯದ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಹೊಸ ರಸ್ತೆ ನಿರ್ಮಾಣದಿಂದ ವಿದ್ಯಾರ್ಥಿಗಳು, ಉದ್ಯೋಗಸ್ಥರು ಹಾಗೂ ಸಾರ್ವಜನಿಕರ ಸಂಚಾರ ಸುಗಮವಾಗಲಿದೆ.ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಕಲೇಶಪುರ ಮಂಡಲ ಬಿಜೆಪಿ ಅಧ್ಯಕ್ಷರಾದ ವಳಲಹಳ್ಳಿ ಅಶ್ವತ್ ಮಾತನಾಡಿ, ಗ್ರಾಮೀಣ ಭಾಗದ ಅಭಿವೃದ್ಧಿಗೆ ರಸ್ತೆ ಮೂಲಭೂತ ಅಗತ್ಯವಾಗಿದೆ. ಸರ್ಕಾರ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಜನರ ಬಹುಕಾಲದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ ಎಂದು ಹೇಳಿದರು. ಗ್ರಾಮದ ಅಭಿವೃದ್ಧಿ ಎಂದರೆ ಕೇವಲ ರಸ್ತೆನಿರ್ಮಾಣವಲ್ಲ, ಜನರ ಬದುಕಿಗೆ ಹೊಸ ದಾರಿ ನಿರ್ಮಿಸುವ ಕೆಲಸ. ಉತ್ತಮ ರಸ್ತೆ ಸಂಪರ್ಕದಿಂದ ಶಿಕ್ಷಣ, ಆರೋಗ್ಯ, ವ್ಯಾಪಾರ, ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ಉತ್ತೇಜನ ಸಿಗುತ್ತದೆ. ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಎರಡು ರಸ್ತೆ ಕಾಮಗಾರಿಗಳು ಸ್ಥಳೀಯ ಜನರ ಜೀವನಮಟ್ಟ ಸುಧಾರಿಸಲು ನೆರವಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ಜನರಿಗೆ ತೊಂದರೆ ಆಗದಂತೆ ಶೀಘ್ರವಾಗಿ ರಸ್ತೆ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ನಡುವೆ ಸಂಪರ್ಕ ಹೆಚ್ಚಾಗಿ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ಗ್ರಾಮೀಣ ಅಭಿವೃದ್ಧಿಯ ದೃಷ್ಟಿಯಿಂದ ಈ ರಸ್ತೆ ಕಾಮಗಾರಿಗಳು ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮೂಲಭೂತ ಸೌಲಭ್ಯಗಳು ಕಲ್ಪಿಸಬೇಕೆಂಬ ಬೇಡಿಕೆಯನ್ನು ಸಾರ್ವಜನಿಕರು ಮುಂದಿಟ್ಟರು.ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಬಿಜೆಪಿ ಕಾರ್ಯಕರ್ತರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದಕ್ಕೆ ಸಂತಸ ವ್ಯಕ್ತಪಡಿಸಿದರು.