ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲಿ: ಶಾಸಕ ಚನ್ನಬಸಪ್ಪ

| Published : Aug 17 2025, 01:36 AM IST

ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲಿ: ಶಾಸಕ ಚನ್ನಬಸಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಕರೆ ನೀಡಿದರು.

ಶಿವಮೊಗ್ಗ: ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಕರೆ ನೀಡಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ 2025-26ನೇ ಸಾಲಿನ ಶಿವಮೊಗ್ಗ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸಮಾರಂಭದಲ್ಲಿ ಅವರು ಮಾತನಾಡಿದರು. ಆರೋಗ್ಯಕರ ಬದುಕಿಗೆ ಕ್ರೀಡೆ ಅತ್ಯವಶ್ಯಕ. ಹಾಗಾಗಿ ಯುವಕರು ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಇದರಿಂದ ದೇಹ ಮತ್ತು ಮನಸ್ಸು ಸದೃಢವಾಗುತ್ತದೆ ಎಂದರು.ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಯುವಕರು ಈ ದೇಶದ ಭವಿಷ್ಯ. ಅವರು ಸದೃಢವಾಗಿದ್ದರೆ ದೇಶವು ಸದೃಢವಾಗಿರುತ್ತದೆ. ಹಾಗಾಗಿ ಕ್ರೀಡೆಯನ್ನು ಬದುಕಿನಲ್ಲಿ ಅಳಡಿಸಿಕೊಳ್ಳಬೇಕು. ಆ ಮೂಲಕ ಕ್ರೀಡೆಯಲ್ಲಿ ಹೆಚ್ಚೆಚ್ಚು ಸಾಧನೆ ಮಾಡಿ ಈ ದೇಶಕ್ಕೆ ಗೌರವ ತರುವಂತಾಗಬೇಕು ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಕ್ರೀಡೆ ಹಾಗೂ ನಿಯಮಿತವಾದ ವ್ಯಾಯಾಮ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದರು.ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್ ಹಾಗೂ ವಿವಿಧ ಶಾಲಾ, ಕಾಲೇಜುಗಳ ಕ್ರೀಡಾಪಟುಗಳು ಇದ್ದರು.