ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು 73 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು 73 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎನ್ಯುಮರೇಷನ್ ಫಾರ್ಮ್ ಪಡೆದಿರುವ 73 ಮತದಾರರ ಹೆಸರುಗಳನ್ನು ಫಾರ್ಮ್ ನಂ.7ರ ಮೂಲಕ ಕೈಬಿಡಲು ಮುಂದಾಗಿರುವ ಕುರಿತು ದೂರು ನೀಡಲಾಗಿದೆ. ಮತದಾರರ ಪಟ್ಟಿಯಿಂದ ಯಾರ ಹೆಸರನ್ನೂ ಅನ್ಯಾಯವಾಗಿ ಕೈಬಿಡಬಾರದು. ಈ ಪ್ರಕರಣದಲ್ಲಿ ಹೆಸರುಗಳನ್ನು ಕೈಬಿಡಲು ಕಾರಣವೇನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳಿಂದಾಗಲೀ ಅಥವಾ ಯಾವುದೇ ರಾಜಕೀಯ ಪಕ್ಷದವರಿಂದಾಗಲೀ ತಪ್ಪಾಗಿದ್ದರೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅರ್ಹ ಮತದಾರರ ಮತದಾನದ ಹಕ್ಕು ಕಸಿಯುವ ಪ್ರಯತ್ನಕ್ಕೆ ಅವಕಾಶ ನೀಡಬಾರದು ಎಂದರು.ಶಿವಮೊಗ್ಗ ನಗರದಲ್ಲಿ ಸುಮಾರು 52 ಸಾವಿರ ಮತದಾರರ ಹೆಸರುಗಳು ಪರಿಷ್ಕರಣೆ ಸಂದರ್ಭದಲ್ಲಿ ಕೈಬಿಡಲಾಗಿದೆ ಎಂಬ ವಿಚಾರದ ಬಗ್ಗೆಯೂ ಕಾಂಗ್ರೆಸ್ ಪರಿಶೀಲನೆ ನಡೆಸುತ್ತಿದೆ. ಮೃತರು, ಸ್ಥಳಾಂತರಗೊಂಡವರು ಸೇರಿದಂತೆ ವಿವಿಧ ಕಾರಣಗಳಿಂದ ಹೆಸರುಗಳು ಬದಲಾಗಿರಬಹುದು. ಆದರೆ ಅರ್ಹ ಮತದಾರರ ಹೆಸರುಗಳು ತಪ್ಪಾಗಿ ಕೈಬಿಡಲ್ಪಟ್ಟಿದ್ದರೆ ಅವುಗಳನ್ನು ಸರಿಪಡಿಸಬೇಕು ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕಿಗೆ ಧಕ್ಕೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಫಾರ್ಮ್ ನಂ.೭ ಸೇರಿದಂತೆ ವಿವಿಧ ಹಂತಗಳಲ್ಲಿ ಲೋಪ ಅಥವಾ ಅಕ್ರಮ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮನೆ-ಮನೆಗೆ ತೆರಳಿ ಪರಿಶೀಲನೆ: ಎಸ್‌ಐಆರ್ ಪ್ರಕ್ರಿಯೆಗಾಗಿ ಕಾಂಗ್ರೆಸ್ ಪಕ್ಷದಿಂದ ಬೂತ್ ಮಟ್ಟದಲ್ಲಿ ಬಿಎಲ್‌ಎ-೨ ಸೇರಿದಂತೆ ವಿವಿಧ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ವಾರ್ಡ್ ಹಾಗೂ ಘಟಕ ಮಟ್ಟದಲ್ಲಿ ಸಭೆ ನಡೆಸಿ, ಮನೆ-ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಎಸ್‌ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಕೆಪಿಸಿಸಿ ಮಟ್ಟದಲ್ಲಿ ವಾರ್‌ರೂಂ ರಚಿಸಲಾಗಿದ್ದು, ನಿವೃತ್ತ ಐಎಎಸ್ ಅಧಿಕಾರಿ ಬಲದೇವಕೃಷ್ಣ ಅವರ ನೇತೃತ್ವದಲ್ಲಿ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಪ್ರಕರಣವೂ ವಾರ್‌ರೂಂ ಗಮನಕ್ಕೆ ಹೋಗಿದೆ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿ ಸಮಗ್ರ ತನಿಖೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.ಯಾವುದೇ ಜಾತಿ, ಧರ್ಮದ ಆಧಾರದ ಮೇಲೆ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
ಬ್ಯಾಲೆಟ್ ಪೇಪರ್‌ಗೆ ಮರಳಬೇಕು: ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂಬುದು ಕಾಂಗ್ರೆಸ್‌ನ ನಿಲುವಾಗಿದೆ. ಮುಂದಿನ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುವ ಕುರಿತು ಪಕ್ಷದೊಳಗೆ ಚರ್ಚೆ ನಡೆದಿದೆ ಎಂದರು.ಮತದಾರರ ಹಕ್ಕು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟ ನಡೆಸಲಿದೆ. ಶಿವಮೊಗ್ಗದಲ್ಲೂ ಕೆಪಿಸಿಸಿ ಸೂಚನೆಯಂತೆ ಪ್ರತಿಭಟನೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದರು.
ಸುಂದರೇಶ್ ವಿಚಾರ ಕೆಪಿಸಿಸಿಗೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಸುಂದರೇಶ್ ಅವರಿಗೆ ಕೆಪಿಸಿಸಿ ನೋಟಿಸ್ ನೀಡಿದ್ದು, ಏಳು ದಿನಗಳ ಕಾಲಾವಕಾಶ ನೀಡಿದೆ. ಅವರ ಉತ್ತರದ ಕುರಿತು ಜಿಲ್ಲಾ ಕಾಂಗ್ರೆಸ್‌ಗೆ ಅಧಿಕೃತ ಮಾಹಿತಿ ಬಂದಿಲ್ಲ. ಮುಂದಿನ ನಿರ್ಧಾರವನ್ನು ಕೆಪಿಸಿಸಿಯೇ ಕೈಗೊಳ್ಳಲಿದೆ ಎಂದು ಹೇಳಿದರು.ಸುಂದರೇಶ್ ಅವರನ್ನು ಮತ್ತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಕೆಪಿಸಿಸಿ ಕೈಗೊಂಡರೂ ತಾವು ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ. ಹುದ್ದೆಯ ಬದಲಾವಣೆ ಪಕ್ಷದ ನಿರ್ಧಾರದಂತೆ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದರು.
ಗೋಷ್ಠಿಯಲ್ಲಿ ವಿಜಯಲಕ್ಷ್ಮೀ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಸುವರ್ಣ ನಾಗರಾಜ್, ಯಮುನಾ ರಂಗೇಗೌಡ, ಕವಿತಾ ರಾಘವೇಂದ್ರ, ಭಾರತಿ ರಾಮಕೃಷ್ಣ, ಮಹಖ್ ಶರೀಫ್ ಇದ್ದರು.