ಡೆಂಘೀ ಜ್ವರದ ಜಾಗೃತಿ ಇರಲಿ: ಡಾ.ಕಾಟ್ವಾ

| Published : May 18 2024, 12:34 AM IST

ಸಾರಾಂಶ

ಸಿಂಧನೂರಿನಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಾಗೂ ಜನಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಿಂಧನೂರು: ಡೆಂಘೀ ಜ್ವರ ಬರದಂತೆ ಜಾಗೃತಿ ವಹಿಸುವುದು ಅವಶ್ಯಕ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕಾಟ್ವಾ ಹೇಳಿದರು.

ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ ಕುರಿತು ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಾಗೂ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಡೆಂಘೀ ಜ್ವರವು ಈಡಿಸ್ ಈಜಿಪ್ಟಿ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಡೆಂಘೀ ಜ್ವರವು ಒಂದು ಮಾರಕವಾದ ಕಾಯಿಲೆ. ಆದರೆ ಚಿಕನ್ ಗುನ್ಯಾ ಮಾರಣಾಂತಿಕವಲ್ಲ. ರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ತಿಳಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ್ ಗುಡಿ, ಸಂಗನಗೌಡ ಪಾಟೀಲ್, ತಾಲೂಕು ಮೇಲ್ವಿಚಾರಕ ಎಫ್ಎ ಹಣಗಿ ಸೇರಿ ಆಸ್ಪತ್ರೆ ಸಿಬ್ಬಂದಿ, ಸನ್ರೈಸ್ ಕಾಲೇಜು ಹಾಗೂ ಬಸವ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು ಇದ್ದರು.