ನ್ಯಾಯಸಮ್ಮತ ಚುನಾವಣೆ ನಡೆಯಲಿ: ಡಿಸಿ ದಿವಾಕರ್‌

| Published : Mar 18 2024, 01:53 AM IST

ನ್ಯಾಯಸಮ್ಮತ ಚುನಾವಣೆ ನಡೆಯಲಿ: ಡಿಸಿ ದಿವಾಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಾದ್ಯಂತ ಎಲ್ಲ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತಿನಲ್ಲಿರಿಸಲಾಗಿದೆ.

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತ, ಮುಕ್ತ, ನ್ಯಾಯಸಮ್ಮತ, ನಿಸ್ಪಕ್ಷಪಾತವಾಗಿ ನಡೆಸಲು ಅಧಿಕಾರಿ ಮತ್ತು ಸಿಬ್ಬಂದಿ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಆಯೋಗವು ಚುನಾವಣೆ ವೇಳಾಪಟ್ಟಿ ಹೊರಡಿಸಿದ ದಿನಾಂಕದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯು ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಈ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕ್ರಿಯಾತ್ಮಕವಾಗಿ ಜಾರಿಯಾಗುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯಾದ್ಯಂತ ಎಲ್ಲ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತಿನಲ್ಲಿರಿಸಲಾಗಿದೆ. ಇಂತಹ ವರ್ಗಾವಣೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ, ತಾಲೂಕಿನ ಹಾಗೂ ಎಲ್ಲ ಇಲಾಖಾ ಹಾಗೂ ಕಚೇರಿ ಮುಖ್ಯಸ್ಥರಿಗೆ ರಜೆ ನೀಡುವುದನ್ನು ನಿರ್ಬಂಧಿಸಲಾಗಿದೆ. ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲಾಧಿಕಾರಿ ಪರವಾನಗಿ ಇಲ್ಲದೇ ರಜೆ ಪಡೆಯುವುದಾಗಲಿ ಅಥವಾ ಕೇಂದ್ರಸ್ಥಾನ ಬಿಡಬಾರದೆಂದು ಸೂಚನೆ ನೀಡಿದರು.ವಿಶೇಷವಾಗಿ ಚುನಾವಣಾ ಕಾರ್ಯಕ್ಕೆ ನಿಯುಕ್ತಿಗೊಳಿಸಲಾಗಿರುವಂತಹ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸಹಾಯಕ ಆಯುಕ್ತರು, ತಹಸೀಲ್ದಾರರು ಹಾಗೂ ಇನ್ನಿತರೆ ಚುನಾವಣೆ ಕೆಲಸದಲ್ಲಿ ಕಾರ್ಯನಿರತರಾಗಿರುವಂತಹ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ಚುನಾವಣಾ ಕೆಲಸ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ಕೆ ಕೇಂದ್ರಸ್ಥಾನ ಬಿಡಬಾರದೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಜಿಲ್ಲೆಯ ಎಲ್ಲ ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.ಜಿಪಂ ಸಿಇಒ ಸದಾಶಿವಪ್ರಭು ಬಿ., ಎಸ್ಪಿ ಶ್ರೀಹರಿಬಾಬು, ಎಡಿಸಿ ಅನುರಾಧ ಇದ್ದರು.