ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಇಂತಹ ಪ್ರಕರಣಗಳ ನಿಯಂತ್ರಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೇಂದ್ರಪ್ಪ ಎನ್. ಹೇಳಿದರು.
ಹಾವೇರಿ:ಬಾಲ್ಯವಿವಾಹ, ಮಕ್ಕಳ ಅಪಹರಣ, ಮಾನವ ಕಳ್ಳಸಾಗಣೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಇಂತಹ ಪ್ರಕರಣಗಳ ನಿಯಂತ್ರಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೇಂದ್ರಪ್ಪ ಎನ್. ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಪೋಕ್ಸೊ ಕಾಯ್ದೆ-2012 ಕುರಿತ ತರಬೇತಿ ಕಾರ್ಯಕ್ರಮ ಮತ್ತು ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನುಬದ್ಧ ದತ್ತು ಸ್ವೀಕಾರದ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳನ್ನು ದತ್ತು ಪಡೆಯುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ. ಆದರೆ ಪ್ರಸ್ತುತ ದತ್ತು ಸ್ವೀಕಾರಕ್ಕೆ ಕಾನೂನಾತ್ಮಕ ಚೌಕಟ್ಟು ರೂಪುಗೊಂಡಿದ್ದು, ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅನಧಿಕೃತವಾಗಿ ಅಥವಾ ಕೇವಲ ಮಾತುಕತೆ, ಪತ್ರಗಳ ಮೂಲಕ ಮಕ್ಕಳನ್ನು ದತ್ತು ಪಡೆದರೆ ಮುಂದಿನ ದಿನಗಳಲ್ಲಿ ಆಸ್ತಿ ಹಕ್ಕು ಸೇರಿದಂತೆ ಹಲವು ಕಾನೂನು ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ಮಕ್ಕಳನ್ನು ದತ್ತು ಪಡೆಯುವವರು ಕಾನೂನುಬದ್ಧ ಪ್ರಕ್ರಿಯೆಯನ್ನೇ ಅನುಸರಿಸಬೇಕು ಎಂದರು.
ಮಕ್ಕಳಿಲ್ಲದ ದಂಪತಿಗಳ ಆಸೆ ಹಾಗೂ ಹಣದ ಆಮಿಷವನ್ನು ದುರುಪಯೋಗಪಡಿಸಿಕೊಂಡು ಕೆಲವು ವ್ಯಕ್ತಿಗಳು ಮಕ್ಕಳನ್ನು ಅಕ್ರಮವಾಗಿ ಪಡೆದು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಿವೆ. ಮಕ್ಕಳನ್ನು ಭಿಕ್ಷಾಟನೆ, ಲೈಂಗಿಕ ಶೋಷಣೆ ಹಾಗೂ ಅಂಗಾಂಗ ಕಳ್ಳಸಾಗಣೆಯಂತಹ ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಅಪಾಯವಿದೆ. ಇಂತಹ ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರು ಜಾಗೃತರಾಗಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಮಾತನಾಡಿ, ದತ್ತು ಸ್ವೀಕಾರವು ಕಾನೂನುಬದ್ಧವಾಗಿ ನಡೆಯುವುದು ಅತ್ಯಂತ ಮುಖ್ಯ. ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆಯುವುದರಿಂದ ಮುಂದೆ ಹಲವು ಕಾನೂನು ತೊಡಕುಗಳು ಉಂಟಾಗಬಹುದು. ಆದ್ದರಿಂದ ಸರ್ಕಾರದ ನಿಯಮಾನುಸಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ದತ್ತು ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಅಪಹರಣ, ಮಾನವ ಕಳ್ಳಸಾಗಣೆ, ಭಿಕ್ಷಾಟನೆಗೆ ಮಕ್ಕಳನ್ನು ಬಳಸಿಕೊಳ್ಳುವುದು ಹಾಗೂ ಲೈಂಗಿಕ ಶೋಷಣೆಯಂತಹ ಅಪರಾಧಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳು ಕಾಣೆಯಾದಾಗ ಅಥವಾ ಅಸುರಕ್ಷಿತ ಸ್ಥಿತಿಯಲ್ಲಿ ಕಂಡುಬಂದಾಗ ತಕ್ಷಣ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು. ಮಕ್ಕಳ ಸುರಕ್ಷತೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಗ್ರಾಮಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮ ಮತ್ತು ಶಾಲಾ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸಿ ಬಾಲ್ಯವಿವಾಹ ಮುಕ್ತ ಹಾವೇರಿ ಜಿಲ್ಲೆಯ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಮಕ್ಕಳನ್ನು ಅನಧಿಕೃತವಾಗಿ ಖರೀದಿಸುವುದು ಅಥವಾ ಮಾರಾಟ ಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ-2015ರ ಕಲಂ 80 ಮತ್ತು 81ರಡಿ ಇಂತಹ ಕೃತ್ಯಗಳಿಗೆ ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ. ಮಕ್ಕಳು ಅನಾಥ ಅಥವಾ ಅಸಹಾಯಕ ಸ್ಥಿತಿಯಲ್ಲಿ ಕಂಡುಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವೇಂದ್ರಪ್ಪ ಎನ್. ಅವರು ಮಕ್ಕಳ ರಕ್ಷಣೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಮಕ್ಕಳ ಮಾರಾಟ ತಡೆ ಹಾಗೂ ಕಾನೂನುಬದ್ಧ ದತ್ತು ಸ್ವೀಕಾರದ ಕುರಿತು ಜಾಗೃತಿ ಮೂಡಿಸುವ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಿಐಡಿ ಆಡಳಿತ ವಿಭಾಗದ ಪೊಲೀಸ್ ಇಲಾಖೆಯ ರೋಹಿತ್ ಸಿ.ಜೆ. ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸೊ ಕಾಯ್ದೆ-2012, ಮಕ್ಕಳ ರಕ್ಷಣೆ ಹಾಗೂ ಕಾನೂನುಬದ್ಧ ದತ್ತು ಪ್ರಕ್ರಿಯೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದಕ್ಕೂ ಮೊದಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವೇಂದ್ರಪ್ಪ ಎನ್. ಅವರು ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನುಬದ್ಧ ದತ್ತು ಸ್ವೀಕಾರದ ಕುರಿತು ಜಾಗೃತಿ ಪ್ರಚಾರಾಂದೋಲನ ಹಾಗೂ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಹೆಚ್.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರೇವತಿ ಎಸ್. ಹೊಸಮಠ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಗೀತಾ ಪಾಟೀಲ, ಸಮಿತಿಯ ಸದಸ್ಯ ಮೂಲಿಮನಿ, ಶಾಲಾ ಶಿಕ್ಷಣ ಇಲಾಖೆಯ ಹಾಲ್ ಸಿದ್ದಪ್ಪ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.