ಬಾಲ ಕಾರ್ಮಿಕರನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಅವರು ಹೇಳಿದರು.
ಹಾವೇರಿ: ಬಾಲ ಕಾರ್ಮಿಕರನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಅವರು ಹೇಳಿದರು. ನಗರದ ಸರ್.ಎಂ.ವಿಶ್ವೇಶ್ವರಯ್ಯ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ವಿದ್ಯಾರ್ಥಿ ಹಂತದಲ್ಲೇ ತಿಳಿದುಕೊಳ್ಳಬೇಕು ಹಾಗೂ ಇತರರಿಗೂ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ಬಾಲ್ಯ ವಿವಾಹ, ಬಾಲಗರ್ಭಿಣಿಯರು ಹಾಗೂ ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬರುತ್ತಿರುವುದು ವಿಷಾದಕರ ಸಂಗತಿ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರೇವತಿ ಹೊಸಮಠ ಮಾತನಾಡಿ, 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ನಡೆದಾಗ, ಕಾಣೆಯಾದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆಮಾಡಿ ಮಾಹಿತಿ ನೀಡಿದರೆ, ಅಂತಹ ಮಕ್ಕಳ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದರು.ಸರ್.ಎಂ.ವಿಶ್ವೇಶ್ವರಯ್ಯ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಬಹಳ ಕಡಿಮೆ ಇದೆ. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಿದರು.ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ ಮಾತನಾಡಿದರು. ಉಪ ಕಾನೂನು ನೆರವು ಅಭಿರಕ್ಷಕ ಎಂ.ಸಿ.ಭರಮಣ್ಣನವರ ಅವರು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ) ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ-2016 ಕುರಿತು ಹಾಗೂ ಆಶಾ ಕಿರಣ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮುತ್ತುರಾಜ ಮಾದರ ಬಾಲಕಾರ್ಮಿಕ ಪದ್ಧತಿಯ ಕಾರ್ಯ ವಿಧಾನ ಮತ್ತು ತಡೆಗಟ್ಟುವಿಕೆ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.ಪ್ರಶಸ್ತಿ ಪತ್ರ ವಿತರಣೆ: ಇದೇ ಸಂದರ್ಭದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ ಬಿ. ಇತರರು ಭಾಗವಹಿಸಿದ್ದರು. ಜಾಥಾ: ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ಹಾವೇರಿ ನಗರದ ಸುಭಾಸ್ ವೃತ್ತದಿಂದ ಜಾಥಾಕ್ಕೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಅವರು ಹಸಿರು ನೀಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ವಿ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ ಬಿ. ಇತರರು ಭಾಗವಹಿಸಿದ್ದರು.ಕೆಲವು ಮಕ್ಕಳು ಬಡತನ, ಅನಕ್ಷರತೆ ಹಾಗೂ ತಬ್ಬಲಿ(ತಂದೆ-ತಾಯಿ ಇಲ್ಲದ) ಹೀಗೆ ಹಲವಾರು ಕಾರಣಗಳಿಂದ ದುಡಿಯಲು ಹೋಗುವುದರಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಚಿಂದಿ ಆಯುವುದು, ಹೋಟೆಲ್, ತರಕಾರಿ ಮಾರಾಟ ಮಾಡುವುದು ಹೀಗೆ ಹಲವಾರು ಕೆಲಸಗಳನ್ನು ಮಾಡುತ್ತಾರೆ. ಇಂತಹ ಮಕ್ಕಳು ಕಂಡುಬಂದರೇ ಕೂಡಲೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಂತ ಮಕ್ಕಳನ್ನು ರಕ್ಷಿಸುತ್ತಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಹೇಳಿದರು.