ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ
ಪಾಕಿಸ್ತಾನದ ವಿರುದ್ಧ ನಡೆದ ಕಾರ್ಗಿಲ್ ಯುದ್ಧದಲ್ಲಿ ೧೯೯೯ನೇ ಇಸವಿಯ ಜುಲೈ ೨೬ ರಂದು ಭಾರತ ಜಯಗಳಿಸಿತು. ಈ ಯುದ್ಧದಲ್ಲಿ ಭಾರತೀಯ ಸೈನಿಕರು ತೋರಿದ ಧೈರ್ಯ ಮತ್ತು ಶೌರ್ಯವನ್ನು ನಾವೆಲ್ಲರೂ ಸ್ಮರಿಸಬೇಕು ಹಾಗೂ ಅವರಿಗೆ ಕೃತಜ್ಞರಾಗಿರಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.ಅವರು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಶನಿವಾರ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಭಾರತೀಯ ಜನತಾ ಪಾರ್ಟಿ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಭಕ್ತಿ ಪೂರ್ವಕ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ ದಿವಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದೇಶದ ರಕ್ಷಣೆ ವಿಷಯದಲ್ಲಿ ಎಂದಿಗೂ ರಾಜಿಯಾಗದೆ ಶತ್ರುಗಳನ್ನು ಹೊಡೆದುರಿಳಿಸಿದ್ದಾರೆ. ಮಾಜಿ ಪ್ರಧಾನಿಗಳಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರು ಕಾರ್ಗಿಲ್ ಯುದ್ದದಲ್ಲಿ ಯಶಸ್ಸು ಸಾಧಿಸಿದರೆ. ಪ್ರಸ್ತುತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನವು ಪದೇ ಪದೇ ವಿನಾಃ ಕಾರಣ ಭಾರತವನ್ನು ಕೆಣಕಿ ಸೋತು ಹೋಗಿದ್ದಾರೆ. ಇತ್ತೀಚೆಗಷ್ಟೆ ಪಹಲ್ಗಾಮ್‌ನಲ್ಲಿ ಭಾರತೀಯ ನಾಗರಿಕರ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೈನಿಕರು ಶತ್ರು ರಾಷ್ಟ್ರದ ಮೇಲೆ ಆಪರೇಷನ್ ಸಿಂದೂರ್ ಹೆಸರಿನಲ್ಲಿ ದಾಳಿ ಮಾಡಿ ವಿಜಯ ಸಾಧಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ ಎಂದರು.
ನಗರ ಬಿಜೆಪಿ ಅಧ್ಯಕ್ಷ ಗಿರಿಧರ್ ಮಾತನಾಡಿ, ೧೯೯೯ರಲ್ಲಿ ಪಾಕಿಸ್ತಾನದ ಯೋಧರು ಭಾರತದ ಒಳಗೆ ನುಸುಳಿದಾಗ ಕಾರ್ಗಿಲ್ ಬೆಟ್ಟದ ಬಳಿ ಸಾವಿರಾರು ವೀರ ಯೋಧರು ಭಾರತದ ಮಾತೃಭೂಮಿಯನ್ನು ಉಳಿಸಿ, ತಮ್ಮ ಉಸಿರು ಚೆಲ್ಲಿದ್ದಾರೆ. ಭಾರತದ ಒಂದಿಂಚು ಭೂಮಿಯನ್ನು ಆಕ್ರಮಿಸಲು ಆಗದಂತೆ ಮಾಡಿದ್ದಾರೆ. ಅಂಥ ಹುತಾತ್ಮರಿಗೆ ನಾವೆಲ್ಲರೂ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂರ್ತಿ ಯಂಜಲಗೆರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಈರಣ್ಣ ಪಟೇಲ್, ಮಾಜಿ ಅಧ್ಯಕ್ಷ ಚಿಕ್ಕಣ್ಣ, ಯುವ ಮೋರ್ಚಾ ಅಧ್ಯಕ್ಷ ಹರೀಶ್ ತಡಕಲೂರು, ರೈತ ಮೋರ್ಚಾ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣಪ್ಪ, ಎಸ್ ಟಿ ಮೋರ್ಚಾ ಅಧ್ಯಕ್ಷ ತೇಜಸ್, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನಮ್ಮ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಭಾಸ್ಕರ, ಉಪಾಧ್ಯಕ್ಷರಾದ ನಾಗರಾಜ್ ಗೌಡರ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯುವರಾಜ್, ಶ್ರೀನಿವಾಸ್, ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೂತೇಶ್, ಎಸ್ ಸಿ ಮೋರ್ಚಾ ಅಧ್ಯಕ್ಷ ಗುರುಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಬೋರಸಂದ್ರ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೂಗನಹಳ್ಳಿ ರಾಮು ಸೇರಿ ಅನೇಕ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.