ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ಇದೀಗ ಎರಡನೇ ಹಂತದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.
ಸಿದ್ದಾಪುರ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸೇರಿದಂತೆ ಸಾಲು ಸಾಲು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಂಘಟಿತ ಹೋರಾಟದ ಮೂಲಕ ಎದುರಿಸಿ ಗೆಲುವು ಸಾಧಿಸಬೇಕಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಜಿ.ಟಿ. ನಾಯ್ಕ ಕರೆ ನೀಡಿದರು.
ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸಂಘಟನ್ ಸೃಜನ್ ಅಭಿಯಾನ- 2ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ಇದೀಗ ಎರಡನೇ ಹಂತದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದರು.ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ. ಸಿದ್ದಾಪುರ ಪಟ್ಟಣದ ರಸ್ತೆ ಅಭಿವೃದ್ಧಿಗೆ ₹9.5 ಕೋಟಿ ವೆಚ್ಚ ಮಾಡಲಾಗಿದೆ. ಪಟ್ಟಣದ ಬಹುದಿನಗಳ ಬೇಡಿಕೆಯಾದ ಕುಡಿಯುವ ನೀರಿಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಭೈರತಿ ಸುರೇಶ್ ಅವರ ಸಹಕಾರದಿಂದ ಶರಾವತಿ ನದಿಯಿಂದ ₹69 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಪರವಾಗಿ ಅವರ ಪುತ್ರ ಆಕಾಶ್ ಲಿಂಬಿಕಾಯಿ ಮಾತನಾಡಿ ಬೆಂಬಲ ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಸ್ವಾಗತಿಸಿದರು. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಪ್ರಮುಖರಾದ ವಿ.ಎನ್. ನಾಯ್ಕ, ಬಿ.ಆರ್. ನಾಯ್ಕ, ಬಾಲಕೃಷ್ಣ ನಾಯ್ಕ, ಎನ್.ಟಿ. ನಾಯ್ಕ, ಸಿ.ಆರ್. ನಾಯ್ಕ, ಸೀಮಾ ಹೆಗಡೆ, ಲಲಿತಾ ನಾಯ್ಕ, ಇಂದಿರಾ ನಾಯ್ಕ, ಮಾರುತಿ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.