ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಅಗರ್‌ಬತ್ತಿ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಬ್ರಹ್ಮಾವರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಅಗರ್‌ಬತ್ತಿ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.
ನಂತರ ಮಾತನಾಡಿದ ಅವರು, “ವಿಕಸಿತ ಭಾರತದ ಸಂಕಲ್ಪವನ್ನು ನಾವು ಯಶಸ್ವಿಗೊಳಿಸಬೇಕಾದರೆ ಮಹಿಳೆಯರು ಇಂತಹ ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು, ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಂಡು ಸ್ವಾವಲಂಬಿಗಳಾಗಿ ಉದ್ಯಮಗಳನ್ನು ಪ್ರಾರಂಭಿಸಬೇಕು. ಇದರಿಂದ ಕುಟುಂಬ ಹಾಗೂ ಸಮಾಜದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.ವಯಸ್ಸು ಹಾಗೂ ಆಸಕ್ತಿ ಆಧಾರದ ಮೇಲೆ ವಿವಿಧ ಗುಂಪುಗಳನ್ನು ರಚಿಸಿ, ಸಣ್ಣ ಪ್ರಮಾಣದ ಉದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್‌ಆರ್‌ಎಲ್‌ಎಂ) ವತಿಯಿಂದ ವಿವಿಧ ರೀತಿಯ ಸಹಕಾರ ಮತ್ತು ನೆರವು ಒದಗಿಸಲಾಗುತ್ತಿದೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಪಡೆದಿರುವ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಅವರು ಮಾತನಾಡಿ, ಮುಖ್ಯ ಅತಿಥಿಗಳು ತಿಳಿಸಿದ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸದ್ಬಳಕೆ ಮಾಡಿಕೊಳ್ಳುವ ಸಂಕಲ್ಪವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.ಈ ಸಂದರ್ಭ ವಿ ಕೇರ್ ಸೊಸೈಟಿಯ ವ್ಯವಸ್ಥಾಪಕ ರಾಘವೇಂದ್ರ ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು. ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮ ನಿರೂಪಿಸಿದರು. ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿದರು. ಹಿರಿಯ ಕಚೇರಿ ಸಹಾಯಕ ರವಿ ವಂದಿಸಿದರು.