ಪಕ್ಷದಲ್ಲಿ ಒಡಕ್ಕಿಲ್ಲ, ಯಾವುದೇ ಗಾಳಿಮಾತುಗಳಿಗೆ ಕಿವಿಗೊಡದೇ ಎಲ್ಲ ನಾಯಕರು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಕ್ಷದಲ್ಲಿ ಒಡಕ್ಕಿಲ್ಲ, ಯಾವುದೇ ಗಾಳಿಮಾತುಗಳಿಗೆ ಕಿವಿಗೊಡದೇ ಎಲ್ಲ ನಾಯಕರು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಕರೆ ನೀಡಿದರು.ತಾಲೂಕಿನ ಹುಣಶ್ಯಾಳ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಮುಂಬರುವ ತಾಪಂ, ಜಿಪಂ ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಪಕ್ಷದ ಟಿಕೆಟ್ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಕಲ್ಪ ನಾವೆಲ್ಲರೂ ಮಾಡೋಣ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಇದೆ. ನುಡಿದಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಗಳಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕ್ಷೇತ್ರಕ್ಕೆ ಸುಮಾರು ₹300 ಕೋಟಿ ಅನುದಾನದ ಪ್ರಯೋಜನ ಜನರಿಗೆ ತಲುಪುತ್ತಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಮಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕಿದೆ ಎಂದು ತಿಳಿಸಿದರು.ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡ ನಂತರ ನಾನು ಜಾತಿ, ಮತ, ಭೇದವಿಲ್ಲದೇ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ಪಕ್ಷ ಸಂಘಟಿಸಿದ್ದೇನೆ. ಕಾರ್ಯಕರ್ತರು ತೋರಿದ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿದ್ದೇನೆ. ಹುಣಶ್ಯಾಳ ಜಿಪಂ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಇಲ್ಲಿನ ಕಾರ್ಯಕರ್ತರು ಶಿಸ್ತಿನಿಂದ ಪಕ್ಷದ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ನನಗೆ ಆನೆಬಲ ತಂದಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸೀರ್ ಅಹ್ಮದ್ ಬೇಪಾರಿ ಮಾತನಾಡಿ, ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ಅವಕಾಶ ಕಲ್ಪಿಸಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಒಗ್ಗಟ್ಟಿನಿಂದ ಮಾಡಬೇಕು ಎಂದರು.ಎಪಿಎಂಸಿ ಮಾಜಿ ಅಧ್ಯಕ್ಷ ಹಳ್ಳೆಪ್ಪಗೌಡ ಚೌದರಿ ಮಾತನಾಡಿ, ಬೂತ್ಮಟ್ಟದಲ್ಲಿ ಕಾರ್ಯಕರ್ತರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಕೊಡಬೇಕಾಗಿದೆ ಎಂದರು. ಮುಖಂಡರಾದ ಸಂಗಮೇಶ ಛಾಯಾಗೋಳ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಕ್ಷೇತ್ರದ 7 ಜಿಲ್ಲಾ ಪಂಚಾಯತಿ ಹಾಗೂ 22 ತಾಲೂಕು ಪಂಚಾಯತಿ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು. ಡಾ.ಪ್ರಭುಗೌಡ ಲಿಂಗದಳ್ಳಿ ಅವರು ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರಿಗೆ ನಾವೆಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಮುಖಂಡ ಶರಣಗೌಡ ಪಾಟೀಲ ಮಾತನಾಡಿ, ಈ ಬಾರಿ ಜಿಪಂ, ತಾಪಂ ನಮ್ಮ ಪಕ್ಷದ ಕಾರ್ಯಕರ್ತರ ಗೆಲುವಾಗಲಿದೆ ಎಂದು ಭವಿಷ್ಯ ನುಡಿದರು.
ಮುಖಂಡ ಲಕ್ಕಪ್ಪ ಬಡಿಗೇರ ಮಾತನಾಡಿ, ಕಾಂಗ್ರೆಸ್ ಪಕ್ಷ ಸರ್ವ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಪಕ್ಷವಾಗಿದೆ ಎಂದರು.ಮುಖಂಡ ಜಹಾಂಗೀರ್ ಸಿರಸಗಿ ಮಾತನಾಡಿ, ಈ ಹಿಂದೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆ ದುರ್ಬಲವಾಗಿತ್ತು. ಅಹಿಂದ್ ವರ್ಗಗಳು ಕಾಂಗ್ರೆಸ್ ಪರವಾಗಿದ್ದಾರೆ. ಡಾ.ಪ್ರಭುಗೌಡ ಲಿಂಗದಳ್ಳಿ ಅವರಿಂದ ಮತ್ತೆ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಭೀಮ ಬಲ ಬಂದಿದೆ ಎಂದರು.ಈ ಸಂದರ್ಭದಲ್ಲಿ ಹೂ.ಹಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳ ಸಾಹೇಬಗೌಡ ಪಾಟೀಲ, ಮುಖಂಡರುಗಳಾದ ಆನಂದಗೌಡ ಚಟ್ಟರಕಿ, ಶಂಕ್ರಪ್ಪ ಬಂಗಾರಗುಂಡ, ಶರಣಪ್ಪ ಪಟ್ಟಣಶೆಟ್ಟಿ, ಮೈನುದ್ದೀನ್ ಬಾಗವಾನ, ಶಫೀಕ್ ಸಿಪಾಯಿ, ಬಿ.ಬಿ.ಕೊಣ್ಣೂರ, ಜಗದೀಶ ಪಾಟೀಲ, ಅಣ್ಣಾರಾಯಗೌಡ ಪಾಟೀಲ, ದಾವಲಸಾಬ್ ನಾಯ್ಕೋಡಿ, ಪ್ರಭುಗೌಡ ಪಾಟೀಲ, ಬಾಬುಗೌಡ ಪಾಟೀಲ, ಭೀಮನಗೌಡ ಪಾಟೀಲ, ಬಂದಗಿಸಾಬ್ ವಠಾರ, ಮಹಾಂತೇಶ ಮುರಕನಾಳ, ಸಾಹೇಬಗೌಡ ಪುರದಾಳ, ಸಾಯಿಕುಮಾರ ಸಲಾದಳ್ಳಿ, ಡಿ.ಕೆ.ಬಡೇಗರ, ರಾಜು ವಾಲಿಕಾರ ಸೇರಿದಂತೆ ಹುಣಶ್ಯಾಳ ಜಿಪಂ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಜಿಲ್ಲೆಯ ನೇತೃತ್ವ ವಹಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲರ ಪ್ರಯತ್ನದಿಂದ ಜಿಲ್ಲೆಯಲ್ಲಿ ಕಾಲುವೆಗಳ ಮೂಲಕ ಕೆರೆ, ಕಟ್ಟೆಗಳನ್ನು ತುಂಬಿಸುವ ಕಾರ್ಯ ನಡೆಯುತ್ತಿದ್ದು, ಅವರು ನೀರಾವರಿ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂಬರುವ ದಿನಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ.-ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ),
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ.