ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಶ್ರಮಿಸೋಣ: ನಲಿನ್ ಅತುಲ್

| Published : Sep 18 2024, 01:50 AM IST

ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಶ್ರಮಿಸೋಣ: ನಲಿನ್ ಅತುಲ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಬೇಕಿದೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನದ 371ಜೆ ವಿಶೇಷ ಸೌಲಭ್ಯ ದೊರೆತ ನಂತರ ಈ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ಆಶಾಕಿರಣ ಮೂಡಿತು. 2013ರ ನಂತರ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಮೀಸಲು ಸೌಲಭ್ಯ ದೊರೆಯಿತು. ಮೀಸಲು ಸೌಕರ್ಯ ಪಡೆದುಕೊಂಡು ಸಾವಿರಾರು ವಿದ್ಯಾರ್ಥಿಗಳು ನೌಕರಿ ಗಿಟ್ಟಿಸಿ ಅನೇಕ ಕುಟುಂಬಗಳು ನೆಮ್ಮದಿಯ ಬದುಕು ಕಾಣುವಂತಾಗಿದೆ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲೆ ಸೇರಿದಂತೆ ಸುತ್ತಲಿನ ವಿವಿಧ ಜಿಲ್ಲೆಗಳನ್ನೊಳಗಂಡ ಈ ಕಲ್ಯಾಣ ಕರ್ನಾಟಕ ಪ್ರದೇಶವು ಶೈಕ್ಷಣಿಕ ಮತ್ತು ಔದ್ಯೋಗಿಕ ಸೇರಿದಂತೆ ಬೇರೆ ಬೇರೆ ರಂಗಗಳಲ್ಲಿ ದಿನೇದಿನೇ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎನ್ನುವ ಗಟ್ಟಿ ಸಂದೇಶ ರವಾನೆಯಾಗಬೇಕು. ಈ ನಿಟ್ಟಿನಲ್ಲಿ ನಾಗರಿಕರ ಬೆಳವಣಿಗೆಗೆ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಪ್ರಾಮಾಣಿಕವಾಗಿ ಶ್ರಮಿಸಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಬದ್ಧತೆ ಹೊಂದಬೇಕು. ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.