ಕೊಪ್ಪಳ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳ: ಜಿಲ್ಲೆಯ ತಲಾ ಆದಾಯ ಹೆಚ್ಚಿಸುವುದು ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಸಮಗ್ರ ಕ್ರಿಯಾಯೋಜನೆ ರೂಪಿಸಿ, ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಟ್ಟಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಮೈಸೂರು ಪ್ರಾಂತ್ಯಕ್ಕೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. 371(ಜೆ) ವಿಶೇಷ ಸ್ಥಾನಮಾನ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ವಿವಿಧ ಯೋಜನೆಗಳು ಜಾರಿಯಾಗುತ್ತಿವೆ. ಕೊಪ್ಪಳ ಜಿಲ್ಲೆಯ ಪ್ರಸ್ತುತ ತಲಾ ಆದಾಯ ₹1.81 ಲಕ್ಷದಷ್ಟಿದ್ದು, ಕಲ್ಯಾಣ ಕರ್ನಾಟಕದ ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಿಗಿಂತ ಮುಂದಿದೆ. ಆದರೆ ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಿಗಿಂತ ಹಿಂದುಳಿದಿದೆ ಎಂದು ಹೇಳಿದರು.

ಉದ್ಯೋಗ ಸೃಷ್ಟಿಗೆ ಆದ್ಯತೆ: ಜಿಲ್ಲೆಯ ಆರ್ಥಿಕತೆ ಬಲಪಡಿಸುವ ಜತೆಗೆ ತಲಾ ಆದಾಯ ಹೆಚ್ಚಿಸಲು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿ ಅಧಿಕಾರಿಗಳು ಸಮಗ್ರ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು. ಸೇವಾ ವಲಯ ಹಾಗೂ ಉತ್ಪಾದನಾ ಕೈಗಾರಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸುವ ಮೂಲಕ ಜಿಲ್ಲೆಯ ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಜಿಡಿಪಿಗೆ ಕೃಷಿ ಕ್ಷೇತ್ರದಿಂದ ಶೇ. 31ರಷ್ಟು ಕೊಡುಗೆ ಇದೆ. ಹೀಗಾಗಿ ಕಟಾವಿನ ನಂತರ ಉಂಟಾಗುವ ನಷ್ಟ ತಡೆಯಲು ಅಗತ್ಯ ಶೇಖರಣಾ ಘಟಕಗಳನ್ನು ಸ್ಥಾಪಿಸುವುದು ಹಾಗೂ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಜಿಲ್ಲೆಯು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 25ನೇ ಸ್ಥಾನದಲ್ಲಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಪಂ ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಸವಡಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಡಯಟ್ ಉಪನಿರ್ದೇಶಕ ಅನಂತಕುಮಾರ ಎ.ಎಸ್., ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಉಪಸ್ಥಿತರಿದ್ದರು.