ಹೆಮ್ಮೆಯ ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಗಳ ಉಳಿವು ಬೆಳವಣಿಗೆಗೆ ಅಸಂಖ್ಯ ಜನರ ತ್ಯಾಗ ಬಲಿದಾನ ಸೇರಿವೆ. ಕರ್ನಾಟಕ ಏಕೀಕರಣಕ್ಕೆ ಹಲವಾರು ಮಹನೀಯರು ಕಾರಣಕರ್ತರಾಗಿದ್ದಾರೆ.

- ಕರ್ನಾಟಕ ಏಕೀಕರಣಕ್ಕೆ ಕಾರಣರಾದವರ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ

ಕನ್ನಡಪ್ರಭ ವಾರ್ತೆ ರಾಮನಗರ

ಕರ್ನಾಟಕ ಏಕೀಕರಣಕ್ಕೆ ಕಾರಣರಾದವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಅದರ ಜೊತೆಗೆ ನಾಡಿನ ಕೀರ್ತಿಯನ್ನು ಹೆಚ್ಚಿಸಲು ಪ್ರಬುದ್ಧತೆಯನ್ನು ಬೆಳೆಸಿಕೊಂಡು ಒಗ್ಗಟ್ಟಾಗಿ ದುಡಿಯೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪುರ್ಷ್ಪಾಚನೆ ನೆರವೇರಿಸಿದ ಬಳಿಕ ರಾಷ್ಟ್ರ ಧ್ವಜ ಆನಂತರ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಹೆಮ್ಮೆಯ ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಗಳ ಉಳಿವು ಬೆಳವಣಿಗೆಗೆ ಅಸಂಖ್ಯ ಜನರ ತ್ಯಾಗ ಬಲಿದಾನ ಸೇರಿವೆ. ಕರ್ನಾಟಕ ಏಕೀಕರಣಕ್ಕೆ ಹಲವಾರು ಮಹನೀಯರು ಕಾರಣಕರ್ತರಾಗಿದ್ದಾರೆ. ಅವರೆಲ್ಲರ ಸೇವೆಯನ್ನು ಸ್ಮರಿಸಬೇಕಿದೆ ಎಂದರು.

ಕನ್ನಡವೇ ಗೆಲುವು, ಕನ್ನಡವೇ ಬದುಕು :

ಆದಿಕವಿ ಪಂಪ ಹೇಳಿರುವಂತೆ “ಮನುಜಮತಂ ಕರ್ನಾಟಕ ದೇಶದೋಲ್ ಉತ್ತಮಂ” ಅಂದರೆ ಕರ್ನಾಟಕದಲ್ಲಿ ಹುಟ್ಟಿದ ಮನುಷ್ಯ ಜನ್ಮವೇ ಉತ್ತಮ ಎಂದಿದ್ದಾರೆ. ಅದೇ ರೀತಿ ಮತ್ತೊಬ್ಬ ಕವಿ ನಯಾಸೇನ “ಸಕಲ ದೇಶದೋಳ್ ಕರ್ಣಾಟಕ ದೇಶಂ ಲೇಸು” ಎಂದಿದ್ದಾರೆ. ಅಂದರೆ ಎಲ್ಲಾ ದೇಶಗಳಲ್ಲಿ ಕರ್ನಾಟಕ ದೇಶವೇ ಲೇಸು ಎಂಬುದಾಗಿದೆ. ಅದೇ ರೀತಿ ಕವಿರಾಜ ಮಾರ್ಗಕಾರ ಹೇಳುವಂತೆ “ಕನ್ನಡವೇ ಗೆಲುವು, ಕನ್ನಡವೇ ಬದುಕು” ಎಂದು ತಿಳಿಸಿದರು.

ಗ್ರಾಮಾನುಭವ ಕಾರ್ಯಕ್ರಮಕ್ಕೆ ಚಾಲನೆ :

ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವವನ್ನು ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಗ್ರಾಮಾನುಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕರೆದೊಯ್ದು ಒಂದು ರಾತ್ರಿ ಹಾಗೂ ಎರಡು ದಿನಗಳ ವಾಸ್ತವ್ಯ ಕಲ್ಪಿಸಲಾಗುವುದು. 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ವಿವಿಧ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಲ್ಲಗಂಬ ಪ್ರದರ್ಶನ ನಡೆಯಿತು. ಸಚಿವ ಬಾಲಕೃಷ್ಣರವರು ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು.

ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ (ಶಶಿ), ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಟರಾಜು ಗಾಣಕಲ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ಮೋಲ್ ಜೈನ್, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಸನ್ ರಘು ಮತ್ತಿತರರು ಉಪಸ್ಥಿತರಿದ್ದರು.

------------------------------

...ಕೋಟ್ ...

ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಮೊಬೈಲ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾಂಶಗಳನ್ನು ಅಭಿವೃದ್ಧಿಪಡಿಸಿದೆ. ಕಂಪ್ಯೂಟರ್, ಮೊಬೈಲ್ ಹಾಗೂ ಕೃತಕ ಬುದ್ದಿಮತ್ತೆ (ಎಐ) ಯಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ ಮೂಲಕ ಮುಂದಿನ ಪೀಳಿಗೆಗೆ ಭಾಷೆಯನ್ನು ಸರಳವಾಗಿ ತಲುಪಿಸುವುದು ಪ್ರಮುಖ ವಿಚಾರವಾಗಿದೆ.

- ಎಚ್.ಸಿ.ಬಾಲಕೃಷ್ಣ, ಜಿಲ್ಲಾ ಉಸ್ತುವಾರಿ ಸಚಿವರು, ಬೆಂ.ದಕ್ಷಿಣ.

-------------------------

1ಕೆಆರ್ ಎಂಎನ್ 1,2.ಜೆಪಿಜಿ

1.ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಬಾಲಕೃಷ್ಣರವರು ಕನ್ನಡ ಧ್ವಜಾರೋಹಣ ನೆರವೇರಿಸಿದರು.----ಪ್ಯಾನೆಲ್ ಫೋಟೋ------

2.ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದ ಮಕ್ಕಳೊಂದಿಗೆ ಗಣ್ಯರು ಇರುವುದು.